ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆಯ ಮಲ್ಪೆ ಠಾಣಾ ವ್ಯಾಪ್ತಿಯ ನೇಜಾರಿನ ಮನೆಯಲ್ಲಿ ಭಾನುವಾರ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರವೀಣ್ ಅರುಣ್ ಚೌಗಲೆಯನ್ನು ಎಂಬಾತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ತಿಳಿಸಿದ್ದಾರೆ.
ಈ ಕುರಿತು ಬುಧವಾರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮಾಹಿತಿ ನೀಡಿದ ಅವರು, ಪ್ರಕರಣ ಸಂಬಂಧ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಸಿ.ಆರ್.ಪಿ.ಎಫ್ ಸಿಬ್ಬಂದಿಯಾಗಿದ್ದಾನೆ ಎಂಬುದು ತನಿಖೆ ನಡೆಸಲಾಗುತ್ತದೆ. ಕೊಲೆಗೆ ನಿಖರ ಕಾರಣ ಏನು ಎಂಬುದನ್ನು ತನಿಖೆ ನಡೆಸಿ ಮಾಹಿತಿಯನ್ನು ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಆರೋಪಿಯು ಮಹಾರಾಷ್ಟ್ರದ ಸಾಂಗ್ಲಿ ಮೂಲದವನಾಗಿದ್ದು, ಏರ್ ಇಂಡಿಯಾದಲ್ಲಿ ಸೂಪರ್ ವೈಸರ್ ವೃತ್ತಿ ನಿರತನಾಗಿದ್ದನು. ಅದೇ ವಿಮಾನದಲ್ಲಿ ಗಗನ ಸಖಿಯಾಗಿದ್ದ ಅಯ್ನಾಝ್ ಳನ್ನು ಕೊಲೆ ಮಾಡಲು ಬಂದಿದ್ದು, ಈ ವೇಳೆ ಮನೆಯಲ್ಲಿದ್ದವರು ವಿರೋಧಿಸಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ಉಳಿದವರನ್ನು ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.
14 ದಿನಗಳ ಪೊಲೀಸ್ ಕಸ್ಟಡಿಗೆ
ಬುಧವಾರ ಸಂಜೆ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಹಾಗು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ, ಉಡುಪಿಯಲ್ಲಿ ಹಾಜರು ಪಡಿಸಿದ್ದು, 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.