ಹೊಸದಿಗಂತ ವರದಿ, ಮಂಗಳೂರು:
ಮಂಗಳೂರಿನ ಡ್ರಗ್ಸ್ ಪೆಡ್ಲರ್‌ಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆಕೆಯಿಂದ ಸುಮಾರು 4 ಕೋಟಿ ರೂ. ಮೌಲ್ಯದ 4 ಕೆ.ಜಿ. ಎಂಡಿಎಂಎ ಸಹಿತ ಸೊತ್ತು ವಶಪಡಿಸಿಕೊಂಡಿದ್ದಾರೆ.
ಜಲಿಯಾ ಝಲ್ವಾಂಗೊ ಬಂಧಿತ ಮಹಿಳೆ.
ಡಿಸೆಂಬರ್ ತಿಂಗಳಲ್ಲಿ ಮೂಲ್ಕಿ ಠಾಣೆ ಪೊಲೀಸರು ನಾಲ್ವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ 524 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಇನ್ನೊಂದು ಪ್ರಕರಣದಲ್ಲಿ ಸುರತ್ಕಲ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ 200 ಗ್ರಾಂ. ಎಂಡಿಎಂಎ ವಶಪಡಿಸಿದ್ದರು. ಈ ಎರಡೂ ಪ್ರಕರಣದ ಜಾಡು ಭೇದಿಸಿದ ಪೊಲೀಸರು, ಇವರಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮಹಿಳೆಯನ್ನು ಬಂಧಿಸಿದ್ದಾರೆ.
ಆರೋಪಿ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಡಿಸೆಂಬರ್‌ನಲ್ಲಿ ಬಂಧಿಸಲಾದ ಆರು ಜನ ಪೆಡ್ಲರ್‌ಗಳು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಉಗಾಂಡಾ ಮಹಿಳೆಗೂ ನ್ಯಾಯಾಂಗ ಬಂಧನ ವಿಧಿಸಿದ್ದು, ಪೊಲೀಸ್ ಕಸ್ಟಡಿಗೆ ಪಡೆದು ಮುಂದಿನ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.


