ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಜಿಸಿ-ನೆಟ್ (UGC NET) ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇರುವುದರಿಂದ ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ಗುರುವಾರ ತಿಳಿಸಿದೆ.
ಎನ್‌ಟಿಎ ಜೂನ್ 18 ರಂದು ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯಲ್ಲಿ 9 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿ ಲಭಿಸಿರುವ ಕಾರಣ ಪರೀಕ್ಷೆಯನ್ನು ರದ್ದುಗೊಳಿಸಲು ಸಚಿವಾಲಯ ನಿರ್ಧರಿಸಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
‘ಪರೀಕ್ಷೆಯ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಆದರೆ ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಅವರ ಬಳಿ ಲಭ್ಯವಿರುವ ಇನ್ಪುಟ್ ಆಧಾರದ ಮೇಲೆ ಸ್ವಯಂ ಪ್ರೇರಿತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ. ಪ್ರಕರಣವನ್ನು ಸಿಬಿಐಗೆ ಉಲ್ಲೇಖಿಸಲಾಗಿದ್ದು ಪ್ರಸ್ತುತ ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದಿಲ್ಲ ಎಂದು ಜೈಸ್ವಾಲ್ ಹೇಳಿದರು.ಪರೀಕ್ಷೆಗೆ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಬುಧವಾರ, ಶಿಕ್ಷಣ ಸಚಿವಾಲಯವು ಅಧಿಸೂಚನೆಯಲ್ಲಿ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಘೋಷಿಸಿತ್ತು. ದೇಶಾದ್ಯಂತ 11.21 ಲಕ್ಷ ಅಭ್ಯರ್ಥಿಗಳ ಪೈಕಿ ಶೇ.81ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಯುಜಿಸಿ ಅಧ್ಯಕ್ಷ ಎಂ.ಜಗದೇಶ್ ಕುಮಾರ್ ಹೇಳಿದ್ದಾರೆ.
.