ಹೊಸದಿಗಂತ ಡಿಜಿಟಲ್ ಡೆಸ್ಕ್
ಪ್ರಧಾನಿ ಮೋದಿ ಅವರು ಸೋಮವಾರ ಮಧ್ಯಾಹ್ನ ಸುಮಾರು 50 ನಿಮಿಷ ಕಾಲ ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ. ಉಕ್ರೇನ್ನಲ್ಲಿನ ಪ್ರಸ್ತುತ ಪರಿಸ್ಥಿತಿಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇದೇವೇಳೆ ಪುಟಿನ್ ಅವರು ಉಕ್ರೇನ್ ಮತ್ತು ರಷ್ಯಾ ತಂಡಗಳ ನಡುವಿನ ಮಾತುಕತೆಯ ಸ್ಥಿತಿಗತಿಗಳ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಿಸಿದ್ದಾರೆ. ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ನೇರವಾಗಿ ಮಾತುಕತೆ ನಡೆಸುವಂತೆ ಪುಟಿನ್ ಅವರನ್ನ ಪ್ರಧಾನಿ ಮೋದಿ ಒತ್ತಾಯಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಲ್ಲದೇ ಸುಮಿ ಸೇರಿದಂತೆ ಉಕ್ರೇನ್‌ನ ಕೆಲವು ಭಾಗಗಳಲ್ಲಿ ಕದನ ವಿರಾಮ ಘೋಷಣೆ ಮತ್ತು ಮಾನವೀಯ ಕಾರಿಡಾರ್‌ಗಳನ್ನು ನಿರ್ಮಾಣಮಾಡಿದ ರಷ್ಯಾ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣೆ ಕುರಿತು ಪ್ರಧಾನಿ ಮೋದಿ ಪ್ರಸ್ತಾಪಿಸಿದರು, ಇದಕ್ಕೆ ಪ್ರತಿಯಾಗಿ ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸಾಧ್ಯವಿರುವ ಎಲ್ಲ ಸಹಕಾರವನ್ನು ನೀಡುವ ಭರವಸೆಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ನೀಡಿದರು.
ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾದ ಸಮಯದಲ್ಲಿ ಮಾರ್ಚ್ 2 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಆಗ ಸಂಘರ್ಷ ವಲಯಗಳಿಂದ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಬಗ್ಗೆ ಚರ್ಚೆ ನಡೆದಿತ್ತು. ಈಗ ಉಭಯ ನಾಯಕರು ಎರಡನೇ ಬಾರಿ ಮಾತುಕತೆ ನಡೆಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ