ಉಳ್ಳಾಲ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವ ಸಭೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬಿಸಲು ಬಂದ ಸಿಬ್ಬಂದಿಗೆ ಗುಂಡು ಹಾರಿಸಿ ಹಣ ದೋಚಿರುವ ಪ್ರಕರಣದ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ.

ನಗರದ ಹೊರವಲಯದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಇಂದು ಹಾಡಹಗಲೇ ಮುಸುಕುಧಾರಿಗಳು ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 12:30 ರ ನಡುವೆ ಶಸ್ತ್ರಸಜ್ಜಿತ ತಂಡದಿಂದ ದರೋಡೆ ನಡೆದಿದೆ.ಕದ್ದ ವಸ್ತುಗಳ ಮೌಲ್ಯ ಸುಮಾರು 10 ರಿಂದ 12 ಕೋಟಿಗಳಷ್ಟಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ಇತ್ತ ಮಾಹಿತಿ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿ ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌

ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!