ದೊರಕದ ವಿದ್ಯುತ್ ಸೌಲಭ್ಯ: ಅರಣ್ಯ ಇಲಾಖೆ ವಿರುದ್ಧ ಶಾಸಕ ಬೋಪಯ್ಯ ಗರಂ

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯ ಮಾಲ್ದಾರೆ ವ್ಯಾಪ್ತಿಯ ಹಲವು ಕುಟುಂಬಗಳ ಕೊಳವೆ ಬಾವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಕಳೆದ ಏಳೆಂಟು ವರ್ಷದಿಂದ ಬಾಕಿ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು, ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಮತಿ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಮಾಲ್ದಾರೆ ವ್ಯಾಪ್ತಿಯಲ್ಲಿ ಅನಾದಿ ಕಾಲದಿಂದಲೂ ವಾಸ ಮಾಡಿಕೊಂಡು ಬರುತ್ತಿರುವ ಕುಟುಂಬಗಳ ಕೊಳವೆ ಬಾವಿಗೆ ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಅನುಮತಿ ನೀಡಿದೆ. ಹೀಗಿದ್ದರೂ ವಿದ್ಯುತ್ ಮಾರ್ಗಕ್ಕೆ ತೊಂದರೆ ನೀಡುತ್ತಿರುವುದು ಏಕೆ ಎಂದು ಕೆ.ಜಿ.ಬೋಪಯ್ಯ ಪ್ರಶ್ನಿಸಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯ ಹಕ್ಕುಪತ್ರ ನೀಡಲಾಗಿದೆ. ಆದರೂ ಜಿಲ್ಲೆಯ ತಿತಿಮತಿ, ಬಾಳೆಲೆ ಮತ್ತಿತರ ಕಡೆಗಳಲ್ಲಿ ಕುಡಿಯುವ ನೀರು, ರಸ್ತೆ, ವಿದ್ಯುತ್ ಸಂಪರ್ಕಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ ಎಂಬ ಬಗ್ಗೆ ದೂರುಗಳು ಬರುತ್ತಿವೆ. ಆದ್ದರಿಂದ ಅರಣ್ಯವೂ ಉಳಿಯಬೇಕು. ಜೊತೆಗೆ ಅಲ್ಲಿ ಬದುಕುತ್ತಿರುವ ಮೂಲ ನಿವಾಸಿಗಳಿಗೆ ಮೂಲ ಸೌಲಭ್ಯವನ್ನೂ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಕಾನೂನಿನ ಇತಿಮಿತಿಯಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಅವಕಾಶ ಮಾಡಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೆ.ಜಿ.ಬೋಪಯ್ಯ ನಿರ್ದೇಶನ ನೀಡಿದರು.
ಸೆಸ್ಕ್ ಇಇ ಅಶೋಕ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಬೆಳಕು ಯೋಜನೆಯಡಿ 1354 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇರುವ 124 ಕುಟುಂಬಗಳಲ್ಲಿ 35 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ. 67 ಕುಟುಂಬಗಳು ಅರಣ್ಯ ಪ್ರದೇಶದಲ್ಲಿದ್ದು, ಅರಣ್ಯ ಹಕ್ಕುಪತ್ರ ಇಲ್ಲದಿರುವುದರಿಂದ ಈ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇದೆ. ಹಾಗೆಯೇ ಮಾಲ್ದಾರೆ ವ್ಯಾಪ್ತಿಯಲ್ಲಿ 22 ಕುಟುಂಬಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇದೆ ಎಂದು ವಿವರಿಸಿದರು.
ಕಾವೇರಿ ನದಿ ಪಾತ್ರ ಸಂರಕ್ಷಿಸಿ
ಸಭೆಯ ಆರಂಭದಲ್ಲಿ ಮಾತನಾಡಿದ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಅವರು,ಕಾವೇರಿ ನದಿ ಪಾತ್ರವನ್ನು ಸಂರಕ್ಷಣೆ ಮಾಡುವಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಬೇಕಿದೆ ಎಂದು ತಿಳಿಸಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು, ಕಾವೇರಿ ನದಿ ದಡದಲ್ಲಿ ಒತ್ತುವರಿ ಮಾಡಿಕೊಂಡಿದ್ದಲ್ಲಿ ಪರಿಶೀಲಿಸಬೇಕಿದೆ. ಮನೆ ಕಟ್ಟಿದ್ದಲ್ಲಿ ಗ್ರಾ.ಪಂ.ವತಿಯಿಂದ ಪರಿಶೀಲಿಸಿ ಕ್ರಮವಹಿಸಬೇಕಿದೆ ಎಂದರು.
ಈ ಸಂದರ್ಭ  ಮಧ್ಯ ಪ್ರವೇಶಿಸಿ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ ಅವರು, ಯಾವುದೇ ವಾಸದ ಮನೆ ನಿರ್ಮಾಣ ಮಾಡುವಾಗ ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆಯಬೇಕಿದೆ. ಅನುಮತಿ ಪಡೆದಿರುವವರಿಗೆ ಮಾತ್ರ ವಿದ್ಯುತ್ ಸಂಪರ್ಕ, ಕುಡಿಯುವ ನೀರು ಕಲ್ಪಿಸಲು ಸಾಧ್ಯ. ಆ ನಿಟ್ಟಿನಲ್ಲಿ ಕಾವೇರಿ ನದಿ ಪಾತ್ರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ನಿಯಮಾನುಸಾರ ಕ್ರಮವಹಿಸಬೇಕಿದೆ ಎಂದರು.
ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶಿವರಾಮ್, ಪೂವಯ್ಯ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವೀರಾಜಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಗಿರೀಶ್ ಗಣಪತಿ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ, ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ತಹಶೀಲ್ದಾರ್ ಪಿ.ಎಸ್.ಮಹೇಶ್, ಗೋವಿಂದರಾಜು, ಯೋಗಾನಂದ, ಮಹೇಶ್, ಭೂದಾಖಲೆಗಳ ಸಹಾಯಕ ನಿರ್ದೇಶಕ ವಿರೂಪಾಕ್ಷ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!