ಅಮೃತ ಮಹೋತ್ಸವ ಯೋಜನೆಯಡಿ 1500 ಗ್ರಾ.ಪಂ.ಗಳಿಗೆ ಹೆಚ್ಚಿನ ಅನುದಾನ: ಮುಖ್ಯಮಂತ್ರಿ ಬೊಮ್ಮಾಯಿ

ಹೊಸದಿಗಂತ ವರದಿ, ಚಿತ್ರದುರ್ಗ:

ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಬೇಡಿಕೆ ಬಂದಿದ್ದು, ರಾಜ್ಯ ಸರ್ಕಾರ ಅತೀ ಶೀಘ್ರದಲ್ಲಿ ಒಳ್ಳೆಯ ಸುದ್ದಿ ಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಬಿಜೆಪಿ ವತಿಯಿಂದ ಇಲ್ಲಿನ ಮುರುಘಾಮಠದಲ್ಲಿ ಹಮ್ಮಿಕೊಂಡಿದ್ದ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಠಿಯಿಂದ ಸ್ಥಳೀಯ ಸಂಸ್ಥೆಗಳು ಮಹತ್ವದ ಪಾತ್ರ ವಹಿಸಬೇಕಿದೆ. ಹಾಗಾಗಿ ಅಮೃತ ಮಹೋತ್ಸವ ಯೋಜನೆಯಡಿ 1500 ಗ್ರಾ.ಪಂ.ಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದರು.
ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಸೇರಿದಂತೆ ನಗರ ಮಟ್ಟದ ಸ್ಥಳೀಯ ಸಂಸ್ಥೆಗಳಿಗೆ ನಗರೋತ್ಥಾನ ಯೋಜನೆಯಡಿ 3885 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು. ಸ್ಥಳೀಯ ಸಮಸ್ಯೆಗಳ ಕುರಿತು ವಿಧಾನಸೌಧದಲ್ಲಿ ಕುಳಿತು ಚರ್ಚೆ ಮಾಡಲು ಆಗುವುದಿಲ್ಲ. ಜನರು ಸಮಸ್ಯೆಗಳ ಜೊತೆ ಬದುಕುತ್ತಿದ್ದಾರೆ. ಇವುಗಳಿಗೆ ಸ್ಥಳೀಯ ಸಂಸ್ಥೆಗಳಲ್ಲೇ ಪರಿಹಾರ ಕಂಡುಕೊಳ್ಳಬೇಕು. ಜನಸಾಮಾನ್ಯರು ಇರುವ ಕಡೆ ಅಭಿವೃದ್ಧಿ ಆಗಬೇಕು ಎಂದು ಹೇಳಿದರು.
ಗ್ರಾಮೀಣ ಜನರಿಗೆ ಸರ್ಕಾರಿ ಸೇವೆಗಳನ್ನು ತಲುಪಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಜನರಿಗೆ ಬೇಕಾದ ದಾಖಲೆಗಳು ಹಾಗೂ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ. ಎಸ್.ಸಿ., ಎಸ್.ಟಿ. ಜನಾಂಗದ ಬಿಪಿಎಲ್ ಕುಟುಂಬದವರಿಗೆ ೭೫ ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ನಾನು ಮುಖ್ಯಮಂತ್ರಿ ಆದ ನಾಲ್ಕು ಗಂಟೆಗಳಲ್ಲಿ ರೈತರ ಮಕ್ಕಳಿಗೆ ವಿದ್ಯಾಸಿರಿ ಯೋಜನೆ ನೀಡಿದೆ ಎಂದರು.
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರಿಗೆ ಉಚಿತ ವಿದ್ಯುತ್ ನೀಡಿದರು. ಈಗ ರೈತರಿಗೆ ಡೀಸೆಲ್ ಖರೀದಿಸಲು ಸಬ್ಸಿಡಿ ನೀಡಲಾಗುತ್ತಿದೆ. ಎಸ್.ಸಿ., ಎಸ್.ಟಿ. ಜನಾಂಗದವರಿಗೆ ಮನೆ ನಿರ್ಮಿಸಿಕೊಳ್ಳಲು ನೀಡುವ ಸಹಾಯಧನವನ್ನು 2 ಲಕ್ಷ ರೂಗಳಿಗೆ ಏರಿಕೆ ಮಾಡಲಾಗಿದೆ. ಜಮೀನು ಖರೀದಿಸಲು ಹಣ ನೀಡಲಾಗುತ್ತಿದೆ. ಹೆಣ್ಣುಮಕ್ಕಳ ಸಬಲೀಕರಣಕ್ಕೆ 500 ಕೋಟಿ ರೂ. ಕಾಯ್ದಿರಿಸಲಾಗಿದೆ. ಸ್ತ್ರೀಶಕ್ತಿ ಸಂಘಗಳಿಗೆ ತಲಾ 1.50 ಲಕ್ಷ ರೂ.ನಂತೆ ನೀಡಲಾಗುವುದು ಎಂದು ಹೇಳಿದರು.
ವಿಶ್ವಮಾನ್ಯ ಪ್ರಧಾನಿ ನರೇಂದ್ರ ಮೋದಿ ಆಡಳಿತ ನಮಗೆ ಶಕ್ತಿ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಅತ್ಯಂತ ಗಟ್ಟಿ ಸಂಘಟನೆ ಹೊಂದಿದೆ. ಬೂತ್ ಮಟ್ಟದಿಂದ ಹಿಡಿದು ಎಲ್ಲ ಹಂತಗಳಲ್ಲೂ ಉತ್ತಮ ಸಂಘಟನೆ ಹೊಂದಿದೆ. ನೈಜ ಆಡಳಿತ ನೀಡುವ ಪಕ್ಷ ಬಿಜೆಪಿ. ಹಾಗಾಗಿ ಪಕ್ಷವನ್ನು ಸಂಘಟನೆ ಮೂಲಕ ಮತ್ತಷ್ಟು ಪ್ರಬಲಗೊಳಿಸಿ ಮುಂದಿನ ಚುನಾವಣೆಯ ನಂತರ ಮತ್ತೆ ಅಧಿಕಾರಕ್ಕೆ ತರಬೇಕೆಂದು ಕರೆ ನೀಡಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರ್, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ.
ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಶಾಸಕರು ಹಾಗೂ ಕೆಎಸ್‌ಆರ್‌ಟಿಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಗೂಳಿಹಟ್ಟಿ ಶೇಖರ್, ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!