ಹೊಸದಿಗಂತ ವರದಿ, ಕುಶಾಲನಗರ
ಪದವಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಕೂಡಿಗೆಯ ಕೃಷಿ ಕ್ಷೇತ್ರದ ಆವರಣದಲ್ಲಿರುವ ಸರಕಾರಿ ಕ್ರೀಡಾ ಪ್ರೌಢಶಾಲೆಯ ಜಾಗದಲ್ಲಿ ಸುಮಾರು 2.5 ಕೋಟಿ ರೂ.ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಂದಾಗಿದೆ.
ಈ ಸಂಬಂಧ ಈಗಾಗಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಲಾಗಿದೆ. ಕೂಡಿಗೆ ಕ್ರೀಡಾ ಶಾಲೆಗೆ ರಾಜ್ಯದ ಕ್ರೀಡಾ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ, ಪದವಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ವಸತಿ ನಿಲಯ ಸ್ಥಾಪನೆ ಬಗ್ಗೆ ಗಮನಸೆಳೆದಿದ್ದರು.ಇದಕ್ಕೆ ಸ್ಪಂದಿಸಿದ ಸಚಿವರು, ಪದವಿ ವಸತಿ ನಿಲಯದ ಕಟ್ಟಡ ನಿರ್ಮಾಣ ಸಂಬಂಧ ಕ್ರಿಯಾ ಯೋಜನೆ ತಯಾರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು
ಅದರಂತೆ ಈಗಾಗಲೇ ಪದವಿ ವಸತಿ ನಿಲಯ ನಿರ್ಮಾಣಕ್ಕಾಗಿ ಎರಡೂವರೆ ಕೋಟಿ ರೂ.ವೆಚ್ಚದ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಸಲ್ಲಿಸಲಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ಅವರು ತಿಳಿಸಿದ್ದಾರೆ.
ರಾಜ್ಯ ಮಟ್ಟದ ಅಧಿಕಾರಿಗಳು ಕ್ರೀಡಾ ಇಲಾಖೆಯಿಂದ ಮಾಹಿತಿಯನ್ನು ಪಡೆದಿದ್ದು, ಸದ್ಯದಲ್ಲೇ ರಾಜ್ಯ ಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿರುವುದಾಗಿ ತಿಳಿದು ಬಂದಿದೆ.
ಕಳೆದ ಮೂರು ವರ್ಷಗಳಿಂದ ಪಿ ಯು ತರಗತಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದವಿ ವ್ಯಾಸಂಗ ಮಾಡಲು ಬೆಂಗಳೂರು ಕ್ರೀಡಾ ಪದವಿ ವಸತಿ ನಿಲಯ ಸೌಲಭ್ಯವನ್ನು ಪಡೆಯಬೇಕಾಗಿತ್ತು. ಇದರಿಂದಾಗಿ ಗ್ರಾಮಾಂತರ ಪ್ರದೇಶದ ಅನೇಕ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿತ್ತು. ಈ ವ್ಯವಸ್ಥೆಯನ್ನು ಸರಿಪಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಪದವಿ ವಸತಿ ನಿಲಯ ಅರಂಭಿಸಬೇಕೆಂದು ಒತ್ತಾಯಿಸಿದ್ದರು.
ಕ್ರೀಡಾಶಾಲೆಯಲ್ಲಿದ್ದು ಪಿಯು ಉತ್ತೀರ್ಣರಾದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಕಳೆದ ಮೂರು ವರ್ಷಗಳಿಂದ ಹೆಣಗಾಡುವಂತಾಗಿತ್ತು. ಸಮರ್ಪಕ ವಾದ ಮೂಲಭೂತ ಸೌಕರ್ಯಗಳು, ಮತ್ತು ವಸತಿ ವ್ಯವಸ್ಥೆ ಇಲ್ಲದ ಕಾರಣದಿಂದಾಗಿ ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುವಂತಾಗಿತ್ತು. ಇದರಿಂದಾಗಿ ಜಿಲ್ಲೆಯಲ್ಲಿ ಪಿ ಯು ತರಗತಿಯಲ್ಲಿ ತೇರ್ಗಡೆ ಹೊಂದಿದ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ವಿದ್ಯಾರ್ಥಿಗಳ ಪೋಷಕರು ಅಳಲು ತೋಡಿಕೊಂಡಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ