November 24, 2026
Tuesday, November 24, 2026
spot_img

ಭಟ್ಕಳದಲ್ಲಿ ಅಪರಿಚಿತ ವಾಹನ ಡಿಕ್ಕಿ: ರಸ್ತೆ ದಾಟುತ್ತಿದ್ದ 2 ವರ್ಷದ ಹೆಣ್ಣು ಚಿರತೆ ಸಾ*ವು

ಹೊಸದಿಗಂತ ವರದಿ ಭಟ್ಕಳ:

ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಿರತೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಟ್ಕಳದ ಸರ್ಪನಕಟ್ಟೆ ಸಮೀಪದ ಹುಯಿಲಮಡಿ ರಸ್ತೆಯಲ್ಲಿ ನಡೆದಿದೆ.

ಮೃತ ಚಿರತೆ ಸುಮಾರು ಎರಡು ವರ್ಷ ಪ್ರಾಯದ ಹೆಣ್ಣು ಚಿರತೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಚಿರತೆಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಿರತೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ, ವಲಯ ಅರಣ್ಯಾಧಿಕಾರಿ ವಿಶ್ವನಾಥ ನಾಯ್ಕ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಶುವೈದ್ಯರೂ ಸ್ಥಳಕ್ಕೆ ಆಗಮಿಸಿ ಚಿರತೆಯ ಮೃತದೇಹವನ್ನು ಪರೀಕ್ಷಿಸಿದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನೂರಾರು ಜನರು ಆಗಮಿಸಿ ಮೃತಪಟ್ಟ ಚಿರತೆಯನ್ನು ವೀಕ್ಷಿಸಿದರು. ಈ ಸಂಬಂಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ವಲಯ ಅರಣ್ಯಾಧಿಕಾರಿ ವಿಶ್ವನಾಥ ನಾಯ್ಕ, “ಸುಮಾರು ಎರಡು ವರ್ಷ ಪ್ರಾಯದ ಹೆಣ್ಣು ಚಿರತೆಗೆ ಯಾವುದೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯಿಂದ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

Must Read