July 8, 2026
Wednesday, July 8, 2026
spot_img

ಬೆಂಗಳೂರಿನಲ್ಲಿ ‘ನಿರ್ಮಲ’ ಅಭಿಯಾನಕ್ಕೆ ಸಾಥ್: ಮಾಸ್ಕ್, ಗ್ಲೌಸ್ ಧರಿಸಿ ಕಸ ಸಂಗ್ರಹಿಸಿದ ಕೇಂದ್ರ ಹಣಕಾಸು ಸಚಿವೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಆಯೋಜಿಸಿದ್ದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಖುದ್ದು ಸ್ವಚ್ಛತಾ ಕಾರ್ಯದಲ್ಲಿ ತೊಡಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಗಮನಸೆಳೆದಿದ್ದಾರೆ.

ಮಾಸ್ಕ್ ಮತ್ತು ಗ್ಲೌಸ್ ಧರಿಸಿ ಕಸ ಸಂಗ್ರಹಿಸಿದ ಅವರು, ಬಳಿಕ ರಸ್ತೆಬದಿ ವ್ಯಾಪಾರಿಗಳೊಂದಿಗೆ ಸಂವಾದ ನಡೆಸಿದರು. ಸ್ವಚ್ಛತಾ ಕಾರ್ಯಕ್ರಮದ ನಂತರ ತಳ್ಳುಗಾಡಿಯಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಸಣ್ಣ ವ್ಯಾಪಾರಿಗಳನ್ನು ಭೇಟಿ ಮಾಡಿದ ಸಚಿವೆ, ಕೇಂದ್ರ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳು ಮತ್ತು ಸಣ್ಣ ಉದ್ಯಮಿಗಳಿಗೆ ನೀಡಲಾಗುತ್ತಿರುವ ಸಾಲ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ಈ ವೇಳೆ ವ್ಯಾಪಾರಿಗಳು ತಮ್ಮ ಸಮಸ್ಯೆಗಳು ಹಾಗೂ ಸಾಲ ಸೌಲಭ್ಯ ಪಡೆಯುವಲ್ಲಿ ಎದುರಾಗುತ್ತಿರುವ ತೊಂದರೆಗಳನ್ನು ಸಚಿವರ ಗಮನಕ್ಕೆ ತಂದರು. ಕೆಲವರು “ನಮಗೂ ಸಾಲ ಸೌಲಭ್ಯ ದೊರೆಯುವಂತೆ ಸಹಾಯ ಮಾಡಿ” ಎಂದು ಮನವಿ ಮಾಡಿದರು.

ಇದನ್ನೂ ಓದಿ:

ವ್ಯಾಪಾರಿಗಳ ಅಹವಾಲುಗಳನ್ನು ಆಲಿಸಿದ ನಿರ್ಮಲಾ ಸೀತಾರಾಮನ್, ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದು, ಸಂಬಂಧಿತ ಅಧಿಕಾರಿಗಳೊಂದಿಗೆ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಚಿವರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿರುವುದು ಹಾಗೂ ಸಾರ್ವಜನಿಕರೊಂದಿಗೆ ನೇರವಾಗಿ ಸಂವಾದ ನಡೆಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !