ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಪ್ರಸ್ತುತ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಡಿಯೋ ಕರೆ ಮಾಡಿ, ಅವರ ಯೋಗಕ್ಷೇಮ, ಸುರಕ್ಷತೆ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಮಾತುಕತೆ ಸಮಯದಲ್ಲಿ ಸಚಿವರು, ಭಾರತ ಸರ್ಕಾರದಿಂದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು. ಜನರು ಸುರಕ್ಷಿತವಾಗಿ ಮತ್ತು ತ್ವರಿತವಾಗಿ ತಾಯ್ನಾಡಿಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ವಿದೇಶಾಂಗ ಸಚಿವಾಲಯದೊಂದಿಗೆ ಈ ವಿಷಯವನ್ನು ತಕ್ಷಣವೇ ಚರ್ಚಿಸುವುದಾಗಿ ಸಚಿವರು ಹೇಳಿದರು. ವಿಡಿಯೋ ಕರೆಯ ಮೂಲಕ ಮಾತನಾಡಿದ ಎಲ್ಲಾ ಕನ್ನಡಿಗರು, ತಾವು ಸುರಕ್ಷಿತವಾಗಿದ್ದು, ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದಾರೆ ಎಂದು ಸಚಿವರಿಗೆ ತಿಳಿಸಿದರು.
ಭಾರತ ಸರ್ಕಾರ, ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮ ಖಚಿತಪಡಿಸಿಕೊಳ್ಳಲು ಎಲ್ಲಾ ನೆರವನ್ನು ನೀಡಲಿದೆ ಎಂದು ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಇದೇ ವೇಳೆ ರಾಜ್ಯ ಸರ್ಕಾರದ ಸಂಬಂಧ ಪಟ್ಟ ಅಧಿಕಾರಿಗಳು ಇರಾನಿನಲ್ಲಿ ನೆಲೆಸಿರುವ ವಿದ್ಯಾರ್ಥಿಗಳನ್ನು ಕೂಡಲೇ ಕರೆ ತರಲು ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.