ಹೊಸ ದಿಗಂತ ವರದಿ, ಕಲಬುರಗಿ:
ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸದೆ ವಾಪಸ್ ಹೋಗಿದ್ದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಯ ಮಾಲೀಕನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯ ಡಿಸಿ ಕಚೇರಿಯಲ್ಲಿ ಶುಕ್ರವಾರ ನಡೆದಿದೆ.
ಜೇವರ್ಗಿಯ ಖಾಸಗಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಪ್ರಕಾಶ ಅನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೊನ್ನೆ ಸಾಲಗಾರರ ಕಿರುಳದಿಂದ ಬೇಸತ್ತು ಖಾಸಗಿ ಶಿಕ್ಷಣ ಸಂಸ್ಥೆಯ ಮಾಲೀಕ ಶಂಕರ್ ಬಿರಾದಾರ್ ಎನ್ನುವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಬೆನ್ನಲ್ಲಿ ಆಕ್ರೋಶಗೊಂಡ ಖಾಸಗಿ ಶಿಕ್ಷಣ ಸಂಸ್ಥೆ ಮಾಲೀಕರು ಹಾಗೂ ಶಿಕ್ಷಕರು ಶಂಕರ್ ಬಿರಾದಾರ ಅವರ ಸಾವಿಗೆ ನ್ಯಾಯ ಕೊಡಿಸುವಂತೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಅನುದಾನ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದರು.
ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಡಿಸಿ ವಿ ವಿ ಜೋತ್ಸ್ನಾ ಅವರು ಡಿಸಿ ಕಚೇರಿ ಮೆಟ್ಟಿಲು ಇಳಿದು ಕೆಳಬಂದು ಮನವಿ ಸ್ವಿಕರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಆದರೆ, ಡಿಸಿ ಮೇಡಂ ಅವರು ಮನವಿ ಸ್ವಿಕರಿಸದೆ ವಾಪಸ್ ಹೋಗಿದ್ದಕ್ಕೆ ನೊಂದ ಪ್ರಕಾಶ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ವಿಷದ ಬಾಟಲಿಯನ್ನು ಕಸಿದುಕೊಂಡು ಅಸ್ವಸ್ಥಗೊಂಡ ಪ್ರಕಾಶ್ ಅವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಕಲ್ಯಾಣ ಕರ್ನಾಟಕದ ಭಾಗದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುವಂತೆ ಆಗ್ರಹಿಸಿ ಖಾಸಗಿ ಶಿಕ್ಷಣ ಸಂಸ್ಥೆ ಮಾಲೀಕರು ಹಾಗೂ ಶಿಕ್ಷಕರು ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಹದಿನೈದು ದಿನಗಳ ಹಿಂದೆ ಅಷ್ಟೇಳ ರಸ್ತೆ ಮೇಲೆ ಬಿಕ್ಷೆ ಬೇಡುವ ಮೂಲಕ ಸರ್ಕಾರದ ಗಮನ ಸೆಳೆದಿದ್ದರು.
ಇಷ್ಟಾದರೂ ದಪ್ಪಚರ್ಮದ ಸರ್ಕಾರಕ್ಕೆ ನಮ್ಮ ಗೋಳು ಕೇಳುತ್ತಿಲ್ಲ ಎಂದು ಆಕ್ರೋಶಗೊಂಡ ಪ್ರತಿಭಟನಾಕಾರರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.