ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಉರ್ದು ಭಾಷೆಯನ್ನು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರದ ಆದೇಶ ವಿವಾದವನ್ನು ಸೃಷ್ಟಿಸಿದೆ.
ಸರ್ಕಾರದ ನಡೆಗೆ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಇತ್ತೀಚಿನ ಅಧಿಸೂಚನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಿತ್ತು. ಆ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಹೇಳಲಾಗಿತ್ತು.
ಉರ್ದು ಭಾಷೆ ಕಡ್ಡಾಯಗೊಳಿಸಿರುವ ಸರ್ಕಾರ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕನ್ನಡ ನಾಡಿನಲ್ಲಿ ಉರ್ದು ಹೇರಿಕೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಅಂಗನವಾಡಿ ಶಿಕ್ಷಕರ ಹುದ್ದೆಗೆ ನೇಮಕಗೊಳ್ಳಲು ಉರ್ದು ಕಡ್ಡಾಯವಾಗಿ ಬರಬೇಕಂತೆ, ಹೀಗೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸಿಎಂ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೆ, ಮೂಡಿಗೆರೆ ಇರುವುದು ಕರ್ನಾಟಕದಲ್ಲಿ, ಕರ್ನಾಟಕದಲ್ಲಿ ಕನ್ನಡ ಅಧಿಕೃತ ಭಾಷೆ, ಅಂತಹದರಲ್ಲಿ ಉರ್ದು ಕಡ್ಡಾಯ ಏಕೆ..?? ಉತ್ತರಿಸಿ ಎಂದು ಕೇಳಿದೆ.