ಹೊಸದಿಗಂತ ಡಿಜಿಟಲ್ ಡೆಸ್ಕ್;
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅನುಮೋದನೆ ಸಿಕ್ಕಿದೆ. ಸಾಲ ಪಡೆದವರ ಆತಂಕಕ್ಕೆ ಇತಿಶ್ರೀ ಹಾಡಲು ಸುಗ್ರೀವಾಜ್ಞೆ ಲಗಾಮು ಬಳಸಲು ಸರ್ಕಾರಕ್ಕೆ ಅವಕಾಶ ದೊರಕಿದೆ. ಸದ್ಯ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿ ಸಂಬಂಧ ಡಿಸಿ, ಎಸ್ಪಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದು, ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. ನೋಂದಣಿ ಆಗಿರದ ಅಕ್ರಮ ಫೈನಾನ್ಸ್ ಕಂಪನಿಗಳು ತಕ್ಷಣ ಬಂದ್ ಆಗಬೇಕು. ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಡಿಸಿ, ಎಸ್ಪಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದು, ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಹೇಳಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದ್ದು, ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು. ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಎಂದಿದ್ದಾರೆ.
ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ, ಆಯಾ ಜಿಲ್ಲೆಯ ಡಿಸಿ, ಎಸ್ಪಿಯೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ. ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.