ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಉತ್ತರಕಾಶಿಯ ಸಿಲ್‌ಕ್ಯಾರಾದಲ್ಲಿ ಸಂಭವಿಸಿದ ಸುರಂಗ ಕುಸಿತದಿಂದಾಗಿ 41 ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಆದರೆ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಳ್ಳಲು ಸಮೀಸುತ್ತಿರುವ ವೇಳೆಯೇ ಡ್ರಿಲ್ಲಿಂಗ್ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತಗೊಳಿಸಲಾಗಿದೆ.
ಅಂತಾರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್ ಈ ಕುರಿತಾಗಿ ಮಾಹಿತಿ ನೀಡಿದ್ದು, ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಅದನ್ನು ಸರಿಪಡಿಸಿ ರಕ್ಷಣಾ ಕಾರ್ಯ ಮುಂದುವರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಉತ್ತರಾಖಂಡ ಸುರಂಗ ಕುಸಿತ
ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರಾ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. ಭಾನುವಾರ ಬೆಳಗಿನ (ನವೆಂಬರ್ 12) ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿ ಬಿದ್ದಿತ್ತು. ಕೂಡಲೇ ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ಕೈಗೊಂಡಿದ್ದರು. ಸುರಂಗ ಕುಸಿತಗೊಂಡು ಇಂದಿಗೆ 13 ದಿನಗಳು ಕಳೆದಿವೆ.