ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………
ಹೊಸ ದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಅತ್ಯಂತ ವೇಗಗತಿಯಲ್ಲಿ ಸಾಗುತ್ತಿದೆ. ಮಂಗಳೂರು ತಾಲೂಕು ಲಸಿಕೆ ನೀಡುವುದರಲ್ಲಿ ರಾಜ್ಯದಲ್ಲಿಯೇ ನಂಬರ್ ವನ್ ಸ್ಥಾನದಲ್ಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಅವರು ಮಂಗಳವಾರ ಸಂಘನಿಕೇತನದಲ್ಲಿ ಆಯೋಜಿಸಿದ್ದ ಆರೋಗ್ಯ ಸ್ವಯಂ ಸೇವಕರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಮಂಗಳೂರು ತಾಲೂಕಿನಲ್ಲಿ ಶೇ.56ಕ್ಕೂ ಅಧಿಕ ಮಂದಿಗೆ ಪ್ರಥಮ ಡೋಸ್, ಮತ್ತು ಶೇ.37ರಷ್ಟು ಎರಡನೇ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಕೋವಿಡ್ ಜಾಗೃತಿ ಕೂಡ ನಿರಂತರವಾಗಿ ನಡೆಯುತ್ತಿದೆ ಎಂದರು.
ಬಿಜೆಪಿ ನೇತೃತ್ವದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಈಗಾಗಗಲೇ 16 ಆಂದೋಲನಗಳು ನಡೆದಿದ್ದು, ಕೋವಿಡ್ ಸೇರಿದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ದ.ಕ.ದಲ್ಲೂ ವಿವಿಧ ಟಾಸ್ಕ್ ಫೋರ್ಸ್ ಸಮಿತಿಗಳ ಮೂಲಕ ಜಾಗೃತಿ ಮೂಡಿಸಲಾಗಿದೆ. ಇದೀಗ ಆರೋಗ್ಯ ಸ್ವಯಂ ಸೇವಕರ ಮೂಲಕ ಜಾಗೃತಿ ಕಾರ್ಯಕ್ಕೆ ಮತ್ತೆ ಚಾಲನೆ ನೀಡಲಾಗಿದೆ ಎಂದವರು ಹೇಳಿದರು.
ಬಿಜೆಪಿ ಸವಾಲಿನ ಮಧ್ಯೆಯೂ ಉತ್ತಮ ಕಾರ್ಯವನ್ನು ಮಾಡುತ್ತಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಕೇವಲ 6 ತಿಂಗಳಿನಲ್ಲಿ ಲಸಿಕೆ ಉತ್ಪಾದಿಸಿರುವುದು ದೇಶದ ಹೆಗ್ಗಳಿಕೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಕೇವಲ 12 ವೆಂಟಿಲೇಟರ್ ಹೊಂದಿತ್ತು. ಈಗ 190 ವೆಂಟಿಲೇಟರ್ಗಳು, 250 ಆಕ್ಸಿಜನೇಟೆಡ್ ಬೆಡ್ಗಳು ವೆನ್ಲಾಕ್ನಲ್ಲಿವೆ. ಉತ್ತಮ ವೈದ್ಯಕೀಯ ಚಿಕಿತ್ಸೆ ಕೂಡ ಇಲ್ಲಿ ದೊರೆಯುತ್ತಿದೆ. ಆದರೆ ಕಾಂಗ್ರೆಸ್ ಜನತೆಯ ದಾರಿ ತಪ್ಪಿಸುವುದರಲ್ಲಿಯೇ ಮಗ್ನವಾಗಿದೆ ಎಂದು ಕಾಮತ್ ಹೇಳಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಸಹ ಪ್ರಭಾರಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು.
ಆರೋಗ್ಯ ಸ್ವಯಂ ಸೇವಕರ ಅಭಿಯಾನದ ಜಿಲ್ಲಾ ಸಂಚಾಲಕ ಈಶ್ವರ ಕಟೀಲ್ ಪ್ರಾಸ್ಚಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.