ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದ್ದು, ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದೆ.
ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.
ಬುಧವಾರ ಬೆಳ್ಳಂಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದ ಅಧಿಕಾರಿಗಳು ಮಾಜಿ ಸಚಿವರನ್ನ ವಶಕ್ಕೆ ಪಡೆದಿದ್ದಾರೆ. ನಾಗೇಂದ್ರ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 2 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ ಎಂದು ಇಡಿ ಮೂಲಗಳು ತಿಳಿಸಿವೆ