ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (SIT) ರಚಿಸಿದೆ. ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳಿರುವ ಎಸ್‌ಐಟಿ ರಚಿಸಲು ಸೂಚಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ, ನಿಗಮದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಅವರು ಸಭೆ ನಡೆಸಿದ್ದು, ಪ್ರಕರಣವನ್ನು ಎಸ್‌ಐಟಿಗೆ ವಹಿಸಲು ತೀರ್ಮಾನಿಸಿದ್ದಾರೆ. ಅದರಂತೆ, ಎಡಿಜಿಪಿ ಮನೀಶ್ ಕಬೀರ್ಕರ್ ನೇತೃತ್ವದಲ್ಲಿ ಶಿವಪ್ರಕಾಶ್, ಹರಿರಾಮ್ ಶಂಕರ್ ಹಾಗೂ ರಾಘವೇಂದ್ರ ಹೆಗಡೆ ಅವರ ತಂಡವು ಪ್ರಕರಣದ ಕುರಿತು ತನಿಖೆ ನಡೆಸಲಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಸುಮಾರು 87 ಕೋಟಿ ರೂಪಾಯಿಯನ್ನು ಆಂಧ್ರಪ್ರದೇಶ, ತೆಲಂಗಾಣ ಸೇರಿ ಹಲವೆಡೆಯಲ್ಲಿರುವ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣವು ರಾಜ್ಯಾದ್ಯಂತ ಸುದ್ದಿಯಾಗಿದೆ. ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಪ್ರತಿಪ್ಷಕಗಳು ಆಗ್ರಹಿಸುತ್ತಿವೆ. ಇದರ ಬೆನ್ನಲ್ಲೇ, ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದ್ದು, ಇದರ ವರದಿ ಆಧಾರದ ಮೇಲೆಯೇ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕೋ, ಬೇಡವೋ ಎಂಬುದನ್ನು ಸಿದ್ದರಾಮಯ್ಯ ನಿರ್ಧರಿಸಲಿದ್ದಾರೆ ಎಂದು ತಿಳಿದುಬಂದಿದೆ.