ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದೊಂದು ವಾರದಲ್ಲಿ ಮೂರು ದಿನಗಳ ಕಾಲ ಸುರಿದ ಭಾರೀ ಮಳೆಯಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 63 ಕೆರೆಗಳು ಭರ್ತಿಯಾಗಿವೆ. ಕೆಂಗೇರಿ, ಯಲಹಂಕ ಹಾಗೂ ನಾಗೇನಹಳ್ಳಿ ಕೆರೆ ಸೇರಿದಂತೆ 63 ಕೆರೆಗಳು ತುಂಬಿವೆ ಎಂದು ಬಿಬಿಎಂಪಿ ತಿಳಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ವ್ಯಾಪ್ತಿಯಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದೆ. ಇದರಲ್ಲಿ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್t ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್‌ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಕಳೆದ ಏಪ್ರಿಲ್‌ಗೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತವೆ ಎಂದು ತಿಳಿಸಿದ್ದಾರೆ.
ತುಂಬಿರುವ ಎಲ್ಲಾ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಯನ್ನ ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.