ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿ ‘ರೆಡ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ಜು.8ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇನ್ನು ನೀರು ತುಂಬಿದ ತಗ್ಗು ಪ್ರದೇಶಗಳು, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಜಾಗ್ರತೆ ವಹಿಸಬೇಕು. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಭಾರಿ ಮಳೆ ಹಾಗೂ ಗಾಳಿಯ ತೀವ್ರತೆ ಹೆಚ್ಚಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಠಿಣ ಮುನ್ನೆಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದುಕೊಂಡು ವಿಪತ್ತು ನಿರ್ವಹಣಾ ಕೆಲಸಗಳನ್ನು ಚಾಚೂ ತಪ್ಪದೆ ನಿರ್ವಹಿಸಬೇಕು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಲು ಮತ್ತು ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲು ಆದೇಶಿಸಲಾಗಿದೆ.



