ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಕರ್ನಾಟಕದಲ್ಲಿ (Coastal Karnataka) ಭಾರೀ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕಾರಣ ಬುಧವಾರ ಬೆಳಿಗ್ಗೆ ವರೆಗೆ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ.
ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.
ಮಣಿಪಾಲದಲ್ಲಿ ಗುಡ್ಡ ಕುಸಿತ
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮಣಿಪಾಲದ ಮುಖ್ಯ ರಸ್ತೆಯ ಪಕ್ಕದಲ್ಲಿದ್ದ ಗುಡ್ಡವೊಂದು ಮಂಗಳವಾರ ಕುಸಿದು ಬಿದ್ದಿದೆ. ಕುಸಿದ ಗುಡ್ಡದ ಮಣ್ಣು ರಸ್ತೆಗೆ ಬಿದ್ದಿದೆ. ಬೆಟ್ಟದ ಮೇಲೆ ಕಟ್ಟಡಗಳಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಪಂಪ್‌ವೆಲ್ ವೃತ್ತ ಸಂಪೂರ್ಣ ಜಲಾವೃತಗೊಂಡಿದ್ದು, ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಗರಕ್ಕೆ ತೆರಳುವ ವಾಹನಗಳು ಜಂಕ್ಷನ್‌ನಲ್ಲಿ ಗಂಟೆಗಟ್ಟಲೆ ನಿಂತಿದ್ದವು.