ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಜುಲೈ 1ರವರೆಗೆ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ, ಕರಾವಳಿ ಜಿಲ್ಲೆಗಳಲ್ಲಿ ಜೂನ್ 29ರಂದು ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 26ರಿಂದಲೇ ಈ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ.
ಮುಂದಿನ 24 ಗಂಟೆಗಳ ಹವಾಮಾನ ವರದಿ
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.
ಗಾಳಿಯ ವೇಗ: ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ವರ್ಷಧಾರೆಯಾಗಲಿದೆ.
ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ
ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.
- ದಕ್ಷಿಣ ಒಳನಾಡು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ ಹಾಗೂ ಕೊಡಗು.
- ಉತ್ತರ ಒಳನಾಡು: ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಸಾರ್ವಜನಿಕರು ಮತ್ತು ರೈತರು ಹವಾಮಾನ ವೈಪರೀತ್ಯಕ್ಕೆ ತಕ್ಕಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.



