ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನೊಂದೆಡೆ 24 ಗಂಟೆಗಳ ಸಹಾಯವಾಣಿ ತೆರೆಯುವಂತೆ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ವರುಣಾರ್ಭಟಕ್ಕೆ ಬೆಂಗಳೂರು ತತ್ತರಗೊಂಡಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಹಾಗೂ ಬಿಬಿಎಂಪಿಗೆ 24 ಗಂಟೆಗಳ ಸಹಾಯವಾಣಿ ಕೇಂದ್ರ ತೆರೆಯುವಂತೆ ಸೂಚನೆ ನೀಡಿದ್ದಾರೆ.
ಸರ್ಕಾರದ ಸೂಚನೆ ಬೆನ್ನಲ್ಲೇ ಜಿಲ್ಲಾಡಳಿತದಿಂದ ಹಾಗೂ ಬಿಬಿಎಂಪಿಯಿಂದ 24 X 7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯಲಾಗಿದೆ. ಮಳೆಯಿಂದಾಗಿ ಸಾರ್ವಜನಿಕರು ತೊಂದರೆಗೆ ಸಿಲುಕಿದಲ್ಲಿ ತಕ್ಷಣಕ್ಕೆ ಸಹಾಯಕ್ಕೆ ಸಿಬ್ಬಂದಿಗಳು ಧಾವಿಸಲಿದ್ದಾರೆ.