ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೆ ಭಾರೀ ಮಳೆ (Bangalore Rains) ಸುರಿದಿದೆ.
ನಗರದ ಮಲ್ಲೇಶ್ವರಂ, ಮೆಜೆಸ್ಟಿಕ್, ಕಾರ್ಪರೇಷನ್, ಗಿರಿನಗರ, ಶಾಂತಿನಗರ, ರಿಚ್ಮಂಡ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಗಾಳಿ ಸಹಿತ ವರುಣನ ಆರ್ಭಟವಾಗಿದೆ.
ಈ ಮಧ್ಯೆ, ಅಂಡರ್ಪಾಸ್ಗಳಲ್ಲಿ ಸಂಚರಿಸಬೇಡಿ ಎಂದು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಭಾನುವಾರ ಸಂಜೆ ಸುರಿದಿದ್ದ ಭಾರೀ ಮಳೆಯಿಂದಾಗಿ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಅದರಲ್ಲಿ ಕಾರು ಸಿಲುಕಿದ ಪರಿಣಾಮ ಯುವತಿಯೊಬ್ಬರು ಮೃತಪಟ್ಟಿದ್ದರು.ಹೀಗಾಗಿ ಮಳೆಯ ಕಾರಣ ಸಾರ್ವಜನಿಕರು ವಿಧಾನಸೌಧದ ಸುತ್ತಲಿನ 6 ಕಿಮೀ ವ್ಯಾಪ್ತಿಯಲ್ಲಿರುವ ಅಂಡರ್ಪಾಸ್ಗಳಲ್ಲಿ ಸಂಚರಿಸಬಾರದು ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ 2 ದಿನಗಳಿಂದ ಸುರಿದ ಮಳೆಯಿಂದಾಗಿ ಕಬ್ಬನ್ಪಾರ್ಕ್ನಲ್ಲಿ 40ಕ್ಕೂ ಹೆಚ್ಚು ಮರಗಳು ಉರುಳಿ ಬಿದ್ದಿವೆ. ಕಬ್ಬನ್ ಉದ್ಯಾನವನದಲ್ಲಿ ಒಟ್ಟು 2 ಸಾವಿರಕ್ಕೂ ಹೆಚ್ಚು ಮರಗಳಿವೆ. ರಸ್ತೆಯ ಮೇಲೆ ಬಿದ್ದಿದ್ದ ಎಲ್ಲ ಮರಗಳನ್ನು ತೆರವುಗೊಳಿಸಿದ್ದೇವೆ. ಇನ್ನೆರಡು ದಿನ ಭಾರಿ ಮಳೆಯ ಮುನ್ಸೂಚನೆ ಇದೆ ಎಂದು ಕಬ್ಬನ್ ಪಾರ್ಕ್ ತೋಟಗಾರಿಕೆ ಉಪನಿರ್ದೇಶಕ ಬಾಲಕೃಷ್ಣ ಹೇಳಿದ್ದಾರೆ.