ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ವಿವಾದ ಕೊನೆಗೂ ಅಂತ್ಯವಾಗಿದೆ. 1,777 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್‌ಅನ್ನು ರಾಜ್ಯ ಸರ್ಕಾರ ರದ್ದು ಮಾಡೋದಾಗಿ ಘೋಷಣೆ ಮಾಡಿದೆ. ವಿಧಾನಸೌಧದಲ್ಲಿ ರೈತರ ಜೊತೆಗಿನ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದ್ದಾರೆ.
ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ.
ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಇತ್ತೀಚೆಗೆ ತಾವು ಬೆಳೆದ ಬೆಳೆ, ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿದ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಜಮೀನು ಸಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು.
ದೇವನಹಳ್ಳಿ ಭಾಗದ 13 ಹಳ್ಳಿಗಳ ಸುತ್ತ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದರ ವಿರುದ್ಧ ರೈತರು ಸಿಡಿದೆದ್ದಿದ್ದು, ತಮ್ಮ ಜಮೀನು ಉಳಿಸಿಕೊಳ್ಳಲು ಹೋರಾಟ ನಡೆಸಿದ್ದರು. ಇದೀಗ ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ವಾಪಸ್ ಪಡೆದಿದೆ.