ಹೊಸ ದಿಗಂತ ವರದಿ, ವಿಜಯಪುರ:
ಜಿಲ್ಲೆಯ ಮೂರು ಶಾಲೆಗಳ ಪೈಕಿ 34 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಜಿಲ್ಲಾಡಳಿತ ಮೂರು ಶಾಲೆಗಳಿಗೆ ರಜೆ ಘೋಷಿಸಿದೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೆಜಿಬಿವಿ ಢವಳಗಿ 20, ಢವಳಗಿಯ ರಾಮಲಿಂಗೇಶ್ವರ ಪ್ರೌಢಶಾಲೆ 6 ಹಾಗೂ ಇಂಡಿ ಆರ್.ಎಂ. ಶಹಾ ಪಬ್ಲಿಕ್ ಶಾಲೆಯ 8 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 34 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ್ದು, ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವೃದ್ದ ಸಾವು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ 75 ವರ್ಷ (ರೋಗಿ ಸಂಖ್ಯೆ 3265588) ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ.
ಕೊರೋನಾ ಸೋಂಕಿತ ವೃದ್ಧ, ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸಂಬಂಧಿತ ಕಾಯಿಲೆಗಳಿಂದ ಬಳಲಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರು ಕೋವಿಡ್ ಲಸಿಕೆ ಎರಡೂ ಡೋಸ್ ಪಡೆದುಕೊಂಡಿದ್ದರು. ಶಿಷ್ಟಾಚಾರದಂತೆ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.