ಹೊಸದಿಗಂತ ಡಿಜಿಟಲ್ ಡೆಸ್ಕ್:
ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ನಕಲಿಯಲ್ಲ. ಅಂತಹ ಅನುಮಾನ ಬೇಡ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಉಡುಪಿ ಗೃಹ ಸಚಿವಾಲಯದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎನ್‌ಕೌಂಟರ್ ಬಗ್ಗೆ ನ್ಯಾಯಾಂಗ ತನಿಖೆಯ ಅಗತ್ಯವಿಲ್ಲ. ಅಗತ್ಯಬಿದ್ದರೆ, ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಪೊಲೀಸರು ಕಾನೂನಿನ ಪ್ರಕಾರ ನಡೆದುಕೊಂಡಿದ್ದಾರೆ. ವಿಕ್ರಂ ಗೌಡ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ನಕ್ಸಲ್ ಚಟುವಟಿಕೆಗಳನ್ನು ನಿಯಂತ್ರಿಸುವ ಸರಕಾರದ ನಿರ್ಧಾರದಿಂದಾಗಿ ಕೂಂಬಿಂಗ್ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದರಿಂದ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು ಎಂದು ಹೇಳಿದ್ದಾರೆ.