ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿತ್ತು. ಸಂಜೆ ಬಳಿಕ ನಡೆದ ಪ್ರತಿಭಟನೆ ಹಿಂಸಚಾರಕ್ಕೆ ತಿರುಗಿದೆ. ಘಟನೆಯ ಹಿನ್ನೆಲೆಯಲ್ಲಿ ಕನಿಷ್ಠ ಎರಡು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ದಾಳಿಯಲ್ಲಿ ಕೆಲವು ಪ್ರಯಾಣಿಕರು ಮತ್ತು ಏಳರಿಂದ ಹತ್ತು ಪೊಲೀಸರು ಗಾಯಗೊಂಡಿದ್ದಾರೆ. ಹಿಂಸಾಚಾರವನ್ನು ನಿಯಂತ್ರಿಸಲು ಗಡಿ ಭದ್ರತಾ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅಲ್ಪಸಂಖ್ಯಾತರ ಪ್ರಾಬಲ್ಯ ಇರುವ ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ಮತ್ತು ಸುಟಿಯಲ್ಲಿ ಉದ್ವಿಗ್ನತೆ ಉಂಟಾಗಿತ್ತು. ನಿಮ್ತಿತಾ ರೈಲು ನಿಲ್ದಾಣದಲ್ಲಿ, ಪ್ರತಿಭಟನಾಕಾರರು ಗಂಟೆಗಟ್ಟಲೆ ರೈಲ್ವೆ ಹಳಿಗಳನ್ನು ತಡೆದು ರೈಲ್ವೇ ಆಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ
ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರೈಲ್ವೆ ಪೊಲೀಸ್ ಪಡೆ ಸಿಬ್ಬಂದಿ ಲಾಠಿ ಪ್ರಹಾರ ನಡೆಸಬೇಕಾಯಿತು. ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದರು. ನಂತರ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿ, ಧ್ವಂಸಗೊಳಿಸಿದ್ದಾರೆ.