ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಸಿಡಿಸಿ , ಆಲ್ರೌಂಡರ್ ಅಕ್ಷರ್ ಪಟೇಲ್ ಹಾಗೂ ಶಿವಂ ದುಬೆ ಉತ್ತಮ ಸಾಥ್ ನಿಂದ ಟೀಂ ಇಂಡಿಯಾ, 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಬಾರಿಸಿದ್ದು, ದಕ್ಷಿಣ ಆಫ್ರಿಕಾ ತಂಡಕ್ಕೆ ಕಠಿಣ ಗುರಿ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿ ಮೊದಲ ಓವರ್‌ನಲ್ಲೇ ಮೂರು ಬೌಂಡರಿ ಬಾರಿಸುವ ಮೂಲಕ ಸ್ಪೋಟಕ ಆರಂಭ ಒದಗಿಸಿಕೊಡುವ ಮುನ್ಸೂಚನೆ ನೀಡಿದರು. ಆದರೆ ಎರಡನೇ ಓವರ್‌ನಲ್ಲೇ ರೋಹಿತ್ ಶರ್ಮಾ(9) ಹಾಗೂ ರಿಷಭ್ ಪಂತ್ ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಇದರ ಬೆನ್ನಲ್ಲೇ ಕ್ರೀಸ್‌ಗಿಳಿದ ಸೂರ್ಯಕುಮಾರ್ ಯಾದವ್ ಅವರನ್ನು ಒಂದಂಕಿ ಮೊತ್ತಕ್ಕೆ(3) ಪೆವಿಲಿಯನ್ನಿಗಟ್ಟುವಲ್ಲಿ ಕಗಿಸೋ ರಬಾಡ ಯಶಸ್ವಿಯಾದರು.
ಕೇವಲ 4.3 ಓವರ್‌ನಲ್ಲಿ 34 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಭಾರತ ತಂಡಕ್ಕೆ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ದಿಢೀರ್ ವಿಕೆಟ್ ಪತನದಿಂದಾಗಿ ನಾಲ್ಕನೇ ಕ್ರಮಾಂಕಕ್ಕೆ ಬಡ್ತಿ ಪಡೆದು ಕ್ರೀಸ್‌ಗಿಳಿದ ಅಕ್ಷರ್ ಪಟೇಲ್ ಚುರುಕಾಗಿ ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರೆ, ಮತ್ತೊಂದು ತುದಿಯಲ್ಲಿ ವಿರಾಟ್ ಕೊಹ್ಲಿ ರಕ್ಷಣಾತ್ಮಕವಾಗಿ ಬ್ಯಾಟ್ ಬೀಸಿದರು. ನಾಲ್ಕನೇ ವಿಕೆಟ್‌ಗೆ ಈ ಜೋಡಿ ಕೇವಲ 54 ಎಸೆತಗಳನ್ನು ಎದುರಿಸಿ ಅಮೂಲ್ಯ 72 ರನ್‌ಗಳ ಜತೆಯಾಟವಾಡಿದರು. ಅಕ್ಷರ್ ಪಟೇಲ್ 31 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ 4 ಆಕರ್ಷಕ ಸಿಕ್ಸರ್‌ಗಳ ನೆರವಿನಿಂದ 47 ರನ್‌ಗಳಿಸಿ ನಾನ್‌ಸ್ಟ್ರೈಕ್‌ನಲ್ಲಿ ರನೌಟ್ ಆಗಿ ಪೆವಿಲಿಯನ್ ಸೇರಿದರು.
ಈ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ವಿರಾಟ್ ಕೊಹ್ಲಿ, ಮೊದಲ 7 ಪಂದ್ಯಗಳಿಂದ ಗಳಿಸಿದ್ದು ಕೇವಲ 75 ರನ್ ಮಾತ್ರವಾಗಿತ್ತು. ಆದರೆ ಫೈನಲ್ ಪಂದ್ಯದಲ್ಲಿ ತಂಡ ಸಂಕಷ್ಟದಲ್ಲಿದ್ದಾಗ, ಜವಾಬ್ದಾರಿಯುತ ಇನಿಂಗ್ಸ್ ಆಡುವ ಮೂಲಕ ತಂಡಕ್ಕೆ ಆಸರೆಯಾದರು. 48 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸಿದ ವಿರಾಟ್ ಕೊಹ್ಲಿ, ಆ ಬಳಿಕ ಸ್ಪೋಟಕ ಇನಿಂಗ್ಸ್ ಆಡಿದರು. ಅಂತಿಮವಾಗಿ ಕೊಹ್ಲಿ 59 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 76 ರನ್ ಸಿಡಿಸಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.
ಇನ್ನು ಕೊನೆಯಲ್ಲಿ ಶಿವಂ ದುಬೆ(27) ಹಾಗೂ ಹಾರ್ದಿಕ್ ಪಾಂಡ್ಯ(5) ಸ್ಪೋಟಕ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು 175ರ ಗಡಿ ದಾಟಿಸಿದರು.