ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ವೀಡನ್ ಮೂಲದ ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರುವಾಸಿಯಾದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ಉತ್ಪಾದನಾ ಘಟಕವನ್ನು ವಿಸ್ತರಿಸಲು ನಿರ್ಧರಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಗುರವಾರ ಘೋಷಿಸಿದೆ.
ಈ ಸಂಬಂಧ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಸರ್ಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೋ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, 25 ವರ್ಷಗಳ ಹಿಂದೆ ವೋಲ್ವೋ ರಾಜ್ಯಕ್ಕೆ ಬಂದು ಬಂಡವಾಳ ಹೂಡಿಕೆ ಮಾಡಿತು ಮತ್ತು ಬದಲಾವಣೆಯನ್ನು ಆರಂಭಿಸಿತು. ಈಗ ವೋಲ್ವೋ ದೇಶದಲ್ಲಿ ಉತ್ತಮ ಗುಣಮಟ್ಟದ ಬಸ್‌ಗಳಿಗೆ ಹೆಸರಾಗಿದೆ. ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ ಎಂದರು.
ಸರ್ಕಾರವು ವೋಲ್ವೋ ಕಂಪನಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಲಭ್ಯ ಮತ್ತು ನೆರವು ನೀಡಲಾಗುತ್ತದೆ. ಇದಕ್ಕೆ ಪ್ರತಿಯಾಗಿ ಕಂಪನಿಯು ಹೆಚ್ಚಿನ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.