ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದಲ್ಲಿ ಶುಕ್ರವಾರದಿಂದ ಆರಂಭವಾಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವವರಿಗೆ ಕೆಎಸ್ಆರ್ಟಿಸಿ ಶುಭ ಸುದ್ದಿ ನೀಡಿದೆ. ಮೈಸೂರು, ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಪ್ರತಿ 30 ನಿಮಿಷಕ್ಕೆ ಒಂದರಂತೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಡಿಸೆಂಬರ್ 20 ರಂದು ಬೆಳಿಗ್ಗೆ 6 ಗಂಟೆಗೆ ಧ್ವಜಾರೋಹಣ ನೆರವೇರಲಿದೆ. 7 ಗಂಟೆಗೆ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಸಮ್ಮೇಳನಾರ್ಧಯಕ್ಷ ಗೊರು ಚನ್ನಬಸಪ್ಪರನ್ನು ಮೆರವಣಿಗೆ, ಪೂರ್ಣ ಕುಂಭ ಸ್ವಾಗತದ ಮೂಲಕ ಕರೆತರಲಾಗುತ್ತದೆ.
ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಸ್ಪೀಕರ್, ಕವಿಗಳು ಭಾಗವಹಿಸಲಿದ್ದಾರೆ. ಅಮೇರಿಕಾದ ಅಕ್ಕ ಸಮ್ಮೇಳನ ಅಯೋಜಕ ಅಮರನಾಥ್ ಈ ಬಾರಿ ಸಮ್ಮೇಳನದಲ್ಲಿ ಭಾಗಿಯಾಗುತ್ತಿದ್ದಾರೆ.
ಮಂಡ್ಯ ಜಿಲ್ಲೆಯ ಪ್ರತಿ ತಾಲೂಕಿನಿಂದ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗಾಗಿ ತಲಾ 15 ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನದಲ್ಲಿ ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.