ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ಬ್ಯಾಟರ್‌ಗಳಾದ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಪಾಕಿಸ್ತಾನ ಬೌಲರ್‌ಗಳ ಚೆಂಡಾಡಿದ್ದಾರೆ.
ವಾರ್ನರ್-ಮಾರ್ಷ್ ಸಿಡಿಲಬ್ಬರದ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 367 ರನ್ ಬಾರಿಸಿದ್ದು, ಪಾಕಿಸ್ತಾನಕ್ಕೆ ಕಠಿಣ ಗುರಿ ನೀಡಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮೊದಲು ಬೌಲಿಂಗ್ ಮಾಡುವ ತೀರ್ಮಾನವನ್ನು ತೆಗೆದುಕೊಂಡರು. ಮೊದಲು ಬ್ಯಾಟಿಂಗ್ ಮಾಡಲಿಳಿದ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಜೋಡಿ ಮೊದಲ ಓವರ್‌ನಿಂದಲೇ ಸ್ಪೋಟಕ ಬ್ಯಾಟಿಂಗ್ ನಡೆಸಿದರು.
ಸ್ಪೋಟಕ ಬ್ಯಾಟಿಂಗ್ ನಡೆಸಿದ ಡೇವಿಡ್ ವಾರ್ನರ್ ಕೇವಲ 85 ಎಸೆತಗಳನ್ನು ಎದುರಿಸಿ ಶತಕ ಪೂರೈಸುವಲ್ಲಿ ಯಶಸ್ವಿಯಾದರು. ಈ ಮೂಲಕ ಪಾಕಿಸ್ತಾನ ಎದುರು ಸತತ 4 ಏಕದಿನ ಪಂದ್ಯಗಳಲ್ಲಿ 4 ಶತಕ ಪೂರೈಸುವಲ್ಲಿ ಯಶಸ್ವಿಯಾದರು. ಇನ್ನು ಮರು ಎಸೆತದಲ್ಲೇ ಮಿಚೆಲ್ ಮಾರ್ಷ್ ಕೂಡಾ ಶತಕ ಪೂರೈಸುವಲ್ಲಿ ಯಶಸ್ವಿಯಾದರು.
ಮಿಚೆಲ್ ಮಾರ್ಷ್ 108 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 9 ಮುಗಿಲೆತ್ತರದ ಸಿಕ್ಸರ್ ಸಹಿತ 121 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಮೂರನೇ ಕ್ರಮಾಂಕಕ್ಕೆ ಬಡ್ತಿ ಪಡೆದು ಕ್ರೀಸ್‌ಗಿಳಿದ ಗ್ಲೆನ್ ಮ್ಯಾಕ್ಸ್ ಮೊದಲ ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಯತ್ನಿಸಿ ಬಾಬರ್ ಅಜಂಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು ಸ್ಟೀವ್ ಸ್ಮಿತ್ ಕೇವಲ 7 ರನ್ ಗಳಿಸಿ ಉಸ್ಮಾನ್ ಮಿರ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು.
ಒಂದು ಕಡೆ ಕೆಲವೇ ರನ್‌ಗಳ ಅಂತರದಲ್ಲಿ ವಿಕೆಟ್ ಪತನವಾದರು ಮತ್ತೊಂದು ತುದಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಡೇವಿಡ್ ವಾರ್ನರ್ 124 ಎಸೆತಗಳನ್ನು ಎದುರಿಸಿ 14 ಬೌಂಡರಿ ಹಾಗೂ 9 ಆಕರ್ಷಕ ಸಿಕ್ಸರ್‌ಗಳ ನೆರವಿನಿಂದ 163 ರನ್ ಸಿಡಿಸಿ ಹ್ಯಾರಿಸ್ ರೌಫ್‌ಗೆ ವಿಕೆಟ್ ಒಪ್ಪಿಸಿದರು.
43 ಓವರ್ ಅಂತ್ಯದ ವೇಳೆಗೆ ಆಸ್ಟ್ರೇಲಿಯಾ 4 ವಿಕೆಟ್ ಕಳೆದುಕೊಂಡು 330 ರನ್ ಗಳಿಸಿತ್ತು. ಇದಾದ ಬಳಿಕ ಕೊನೆಯ 7 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕೇವಲ 37 ರನ್ ಗಳಿಸಲಷ್ಟೇ ಶಕ್ತವಾಯಿತು.