ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಸೋಮವಾರ ಮಳೆ ಕೊಂಚ ಕಡಿಮೆಯಾಗಿದ್ದು, ಆದರೆ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಕಳೆದ ಐದಾರು ದಿನಗಳಿಂದ ಮಹಾರಾಷ್ಟ್ರದಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿ ಅಧಿಕ ಹಾನಿಗೆ ಕಾರಣವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರೆದಿದೆ. ರಕ್ಷಣಾ ಸಿಬ್ಬಂದಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.
ರಾಜ್ಯದಲ್ಲಿ ಇದುವರೆಗೂ 1028 ಗ್ರಾಮಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿರುವುದಾಗಿ ಪರಿಹಾರ ಹಾಗೂ ಪುನರ್ವಸತಿ ಇಲಾಖೆ ಮಾಹಿತಿ ನೀಡಿದೆ.
ಪ್ರವಾಹಪೀಡಿತ ಪ್ರದೇಶಗಳಿಂದ ಇದುವರೆಗೂ 2.29 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. 25,564 ಪ್ರಾಣಿಗಳು ಪ್ರವಾಹದಲ್ಲಿ ಮೃತಪಟ್ಟಿವೆ. 56 ಮಂದಿ ಗಾಯಗೊಂಡಿದ್ದಾರೆ. 1028 ಗ್ರಾಮಗಳಿಂದ 100 ಮಂದಿ ಕಣ್ಮರೆಯಾಗಿದ್ದಾರೆ. 259 ಪರಿಹಾರ ಕೇಂದ್ರಗಳಲ್ಲಿ 7,832 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.
ಸೋಮವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಉದ್ಧವ್ ಠಾಕ್ರೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.