ಮಹದಾಯಿಯಿಂದ ನೀರು ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ

ಹೊಸ ದಿಗಂತ ವರದಿ , ಮಂಡ್ಯ :

ಮಹದಾಯಿ ನೀರನ್ನು ಕರ್ನಾಟಕ್ಕೆ ಕೊಡಬೇಡಿ ಎಂದಿದ್ದ ಸೋನಿಯಾ ಗಾಂಧಿಯೊಂದಿಗೆ ರಾಹುಲ್‌ಗಾಂಧಿ ಭಾರತ್ ಜೋಡೋ ಪಾದಯಾತ್ರೆ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ಮಾಡಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್, ಗೋವಾದಲ್ಲಿ ನಡೆದ ವಿಧಾನ ಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಕರ್ನಾಟಕ ರಾಜ್ಯಕ್ಕೆ ಒಂದು ಹನಿ ನೀರನ್ನೂ ಮಹದಾಯಿ ನದಿಯಿಂದ ಕೊಡಬೇಡಿ ಎಂದು ಹೇಳಿಕೆ ನೀಡುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಅಪಮಾನ ಮಾಡಿದ್ದರು. ಈಗ ಮಂಡ್ಯದಲ್ಲಿ ಭಾರತ್ ಜೋಡೋ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಹನಿ ನೀರನ್ನೂ ಕೊಡಬೇಡಿ ಎಂದಿದ್ದ ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಮಂಡ್ಯದಲ್ಲೇ ಬಿಸ್ಲರಿ ವಾಟರನ್ನು ನೀಡುತ್ತೇವೆ ಎಂದ ಅವರು, ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳನ್ನೂ ಸರಿಯಾಗಿ ಕೊಂಡೊಯ್ಯುವ ನಿಟ್ಟಿನಲ್ಲಿ ರಾಷ್ಟ್ರೀಯ ನಾಯಕರು ಉದಾರತೆ ಮೆರೆಯಬೇಕು. ಅದನ್ನು ಬಿಟ್ಟು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ದೂರಿದರು.
ಕರ್ನಾಟಕ ವಿರೋಧಿ ಹೇಳಿಕೆ ನೀಡಿದ್ದ ಸೋನಿಯಾಗಾಂಧಿ ಅವರ ವಿರುದ್ಧ ನಾವು ಪೋಸ್ಟರ್ ಅಭಿಯಾನ ಮಾಡುತ್ತಿದ್ದೇವೆ. ಇಂತಹ ಜನವಿರೋಧಿ ಹೇಳಿಕೆ ನೀಡಿರುವ ನಿಮಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರೊಂದಿಗೆ ರಾಜ್ಯದಲ್ಲಿ ಪಾದಯಾತ್ರೆ ನಡೆಸುವ ನೈತಿಕತೆಯಾದರೂ ಇದೆಯಾ ಎಂದು ಪ್ರಶ್ನಿಸಿದ್ದಾರೆ.
ಜವಹರಲಾಲ್ ವಿಶ್ವವಿದ್ಯಾಲಯದಲ್ಲಿ ಭಾರತವನ್ನು ತುಂಡು ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕನ್ನಯ್ಯಕುಮಾರ್ ಅವರ ಹೆಗಲ ಮೇಲೆ ಕೈ ಹಾಕಿಕೊಂಡು ಪಾದಯಾತ್ರೆ ಮಾಡುತ್ತಿರುವ ರಾಹುಲ್ ಗಾಂಧಿಯವರ ಧೋರಣೆ ಖಂಡಿಸಿದರು.
ದೇಶದ್ರೋಹಿಗಳನ್ನು ಜೊತೆಯಲ್ಲಿಟ್ಟುಕೊಂಡು ಜೋಡೋ ಯಾತ್ರೆ ಮಾಡುತ್ತಿರುವ ನಿಮಗೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಮುಖಂಡರಾದ ಹೊಸಹಳ್ಳಿ ಶಿವು, ಹನಿಯಂಬಾಡಿ ನಾಗರಾಜು, ಮಾದರಾಜ ಅರಸ್ ಇತರರು ಪೋಸ್ಟರ್ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!