ಹೊಸದಿಗಂತ ರಾಯಚೂರು:
ದೇಶದಲ್ಲಿ ರಾಜಸ್ಥಾನದ ನಂತರ ಅತಿ ಹೆಚ್ಚು ಮಳೆಯಾಶ್ರಿತ ಭೂಮಿ ಹೊಂದಿರುವುದು ಕರ್ನಾಟಕ. ಈ ಒಣ ಭೂಮಿಯನ್ನು ಹಸಿರಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಅಂಬಾದೇವಿ ಮಠದಲ್ಲಿ ಆಯೋಜಿಸಿದ್ದ ಜಾತ್ರಾ ಮಹೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದ ರೈತರ ಹಿತದೃಷ್ಟಿಯಿಂದ ಕೈಗೊಳ್ಳಲಿರುವ ಪ್ರಮುಖ ನೀರಾವರಿ ನಿರ್ಧಾರಗಳನ್ನು ಸಿಎಂ ಈ ಸಂದರ್ಭದಲ್ಲಿ ಹಂಚಿಕೊಂಡರು.
ಜೂನ್ ಅಂತ್ಯದೊಳಗೆ ತುಂಗಭದ್ರಾ ಜಲಾಶಯದ ಎಲ್ಲಾ ಕ್ರಸ್ಟ್ ಗೇಟ್‌ಗಳನ್ನು ಅಳವಡಿಸಲಾಗುವುದು. ಮುಂಬರುವ ಮುಂಗಾರು ಹಂಗಾಮಿನಲ್ಲಿ ರೈತರ ಜಮೀನುಗಳಿಗೆ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಒಣ ಭೂಮಿಗೆ ಜೀವ ತುಂಬಲು ರಾಜ್ಯಾದ್ಯಂತ ಏತ ನೀರಾವರಿ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.
ಯೋಜನೆಯ ತೀರ್ಪು ರಾಜ್ಯದ ಪರವಾಗಿದ್ದರೂ, ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಲು ವಿಳಂಬ ಮಾಡುತ್ತಿದೆ ಎಂದು ಕೇಂದ್ರದ ವಿರುದ್ಧ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಟೀಕೆಗಳನ್ನು ಸಿಎಂ ಸಿದ್ದರಾಮಯ್ಯ ತಳ್ಳಿಹಾಕಿದರು. ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿಲ್ಲ. ಗ್ಯಾರಂಟಿಗಳ ಜೊತೆಗೇ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ. ಈವರೆಗೆ 643 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದು, ಇದಕ್ಕಾಗಿ ಸರ್ಕಾರ 16 ಸಾವಿರ ಕೋಟಿ ರೂ. ಭರಿಸಿದೆ. ಗ್ಯಾರಂಟಿ ಯೋಜನೆಗಳ ಪ್ರಭಾವದಿಂದಾಗಿ ಕರ್ನಾಟಕವು ದೇಶದಲ್ಲೇ ತಲಾ ಆದಾಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಅವರು ಹೆಮ್ಮೆಯಿಂದ ತಿಳಿಸಿದರು.
ಶಾಸಕ ಹಂಪನಗೌಡ ಬಾದರ್ಲಿ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವರಾದ ಶರಣಪ್ರಕಾಶ ಪಾಟೀಲ, ಸತೀಶ ಜಾರಕಿಹೊಳಿ, ರಾಮಲಿಂಗಾರಡ್ಡಿ, ಶಿವರಾಜ ತಂಗಡಗಿ ಸೇರಿದಂತೆ ಹಲವು ಶಾಸಕರು ಮತ್ತು ಪ್ರಮುಖ ಗಣ್ಯರು ಭಾಗವಹಿಸಿದ್ದರು.

