ಹೊಸದಿಗಂತ ಡಿಜಿಟಲ್ ಡೆಸ್ಕ್:
ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ಇದು ಆ ಪಕ್ಷದ ಆಂತರಿಕ ವಿಚಾರ. ಅದಕ್ಕೆ ನಾವು ತಲೆ ಹಾಕುವುದಿಲ್ಲ. ಯತ್ನಾಳ್ ಹೇಳಿಕೆಯನ್ನು ಯಡಿಯೂರಪ್ಪ, ವಿಜಯೇಂದ್ರ, ಅಶೋಕ, ಕೇಂದ್ರ ಸಚಿವ ಸೋಮಣ್ಣ ಹಾಗೂ ಬೊಮ್ಮಾಯಿ ಅವರ್ಯಾರು ಖಂಡಿಸಿದ್ದಾರೆಯೇ? ಯಾರೂ ಸಹ ಖಂಡಿಸಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು.
ಬಸವಣ್ಣನವರ ಚಿಂತನೆಯೇ ಕಾಂಗ್ರೆಸ್ ಪಕ್ಷದ ಚಿಂತನೆ. ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಗಳಾದಾಗ ಬಸವಣ್ಣನವರ ಜಯಂತಿಯಂದೇ ಪ್ರಮಾಣ ವಚನ ತೆಗೆದುಕೊಂಡರು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯ ಮಾಡಿದ್ದು, ಬಸವಣ್ಣನವರ ಜಯಂತಿಗೆ ಶಕ್ತಿ ಕೊಟ್ಟಿದ್ದು, ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಯಾವ ಜನತಾದಳ, ಬಿಜೆಪಿ, ಜನಸಂಘವೂ ಈ ಕೆಲಸ ಮಾಡಿಲ್ಲ ಎಂದರು.