ಜಮ್ಮು-ಕಾಶ್ಮೀರದ ಶತ್ರುಗಳಿಗೆ ತಕ್ಕ ಪಾಠ ಕಲಿಸಲು ನಾವು ಹಿಂಜರಿಯುವುದಿಲ್ಲ: ಪ್ರಧಾನಿ ಮೋದಿ ಭರವಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು ಮತ್ತು ಕಾಶ್ಮೀರದ ಶತ್ರುಗಳಿಗೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರ ಹಿಂಜರಿಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರಾಡಳಿತ ಪ್ರದೇಶದ ಜನರಿಗೆ ಭರವಸೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಇಂದು (ಜೂನ್ 20) ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ.

ಶ್ರೀನಗರದಲ್ಲಿ ಯುವಕರ ಸಬಲೀಕರಣ, ಜಮ್ಮು ಕಾಶ್ಮೀರದ ಪರಿವರ್ತನೆ ಕಾರ್ಯಕ್ರಮದಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನೀವೆಲ್ಲರೂ ಹೊಸ ಶಕ್ತಿಗಾಗಿ ಮೆಚ್ಚುಗೆಗೆ ಅರ್ಹರು. ಆದರೆ ಶಾಂತಿ ಮತ್ತು ಮಾನವೀಯತೆಯ ಶತ್ರುಗಳು ಜಮ್ಮು ಮತ್ತು ಕಾಶ್ಮೀರದ ಪ್ರಗತಿಯನ್ನು ಇಷ್ಟಪಡುವುದಿಲ್ಲ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯನ್ನು ನಿಲ್ಲಿಸಲು ಮತ್ತು ಇಲ್ಲಿ ಶಾಂತಿ ಸ್ಥಾಪನೆಯನ್ನು ತಡೆಯಲು ಅವರು ಏನೇನೋ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಆದ್ರೆ ಸರಕಾರ ಭಯೋತ್ಪಾದನಾ ದಾಳಿಯನ್ನು ಗಂಭೀರವಾಗಿ ಪರಿಗಣಿಸಿದೆ. ಗೃಹ ಸಚಿವರು ಸ್ಥಳೀಯ ಆಡಳಿತದೊಂದಿಗೆ ಎಲ್ಲವನ್ನೂ ಪರಿಶೀಲಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶತ್ರುಗಳಿಗೆ ಪಾಠ ಕಲಿಸಲು ನಾವು ಹಿಂಜರಿಯುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಜಮ್ಮು ಮತ್ತು ಕಾಶ್ಮೀರ ಚುನಾವಣೆ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಜನರು ಸ್ಥಳೀಯ ಮಟ್ಟದಲ್ಲಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಅವರ ಮೂಲಕ ನೀವು ಸಮಸ್ಯೆಗಳನ್ನು ಪರಿಹರಿಸುವ ಮಾರ್ಗಗಳನ್ನು ಕಂಡುಕೊಳ್ಳುತ್ತೀರಿ. ಇದಕ್ಕಿಂತ ಉತ್ತಮವಾದದ್ದು ಯಾವುದು? ಹೀಗಾಗಿ, ಈಗ ವಿಧಾನಸಭೆ ಚುನಾವಣೆಗೆ ಸಿದ್ಧತೆಯೂ ಆರಂಭವಾಗಿದೆ. ನಿಮ್ಮ ಮತಗಳಿಂದ ಜಮ್ಮು ಮತ್ತು ಕಾಶ್ಮೀರದ ಹೊಸ ಸರ್ಕಾರವನ್ನು ಆಯ್ಕೆ ಮಾಡುವ ಕಾಲ ದೂರವಿಲ್ಲ. ಆ ದಿನ ಕೂಡ ಶೀಘ್ರದಲ್ಲೇ ಬರಲಿದೆ. ಜಮ್ಮು ಮತ್ತು ಕಾಶ್ಮೀರವು ಮತ್ತೊಮ್ಮೆ ತನ್ನ ಭವಿಷ್ಯವನ್ನು ರಾಜ್ಯವಾಗಿ ಉತ್ತಮಗೊಳಿಸುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು ಕಾಶ್ಮೀರದಲ್ಲಿ 1,500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 84 ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. 1800 ಕೋಟಿ ರೂ. ಮೌಲ್ಯದ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಯೋಜನೆಗಳನ್ನು ಉದ್ಘಾಟಿಸಲಾಯಿತು. ಈ ವೇಳೆ ಮಾತನಾಡಿದ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ನಾವು ಕಾಣುತ್ತಿರುವ ಬದಲಾವಣೆಗಳು ಕಳೆದ 10 ವರ್ಷಗಳಲ್ಲಿ ನಮ್ಮ ಕೆಲಸದ ಫಲಿತಾಂಶವಾಗಿದೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!