ಕರ್ನಾಟಕ ರಾಜ್ಯದಾದ್ಯಂತ ದಾಖಲಾಗುತ್ತಿರುವ ತೀವ್ರ ಚಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಕೆಲವು ದಿನಗಳಿಂದೀಚೆಗೆ ಕನಿಷ್ಠ ತಾಪಮಾನವು ಗಣನೀಯವಾಗಿ ಕುಸಿಯುತ್ತಿದ್ದು, ವಿಶೇಷವಾಗಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಶೀತದ ಅಲೆಯು ಆವರಿಸುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಡಿಸೆಂಬರ್ 14 ರಿಂದ 16 ರವರೆಗೆ ರಾಜ್ಯದಲ್ಲಿ ಚಳಿಯ ಜೊತೆಗೆ ಶೀತಗಾಳಿ ಬೀಸುವ ಸಾಧ್ಯತೆಯಿದೆ.
ಅತ್ಯಂತ ತೀವ್ರ ಚಳಿಯ ಕಾರಣ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ ಮತ್ತು ಬೆಳಗಾವಿ ಸೇರಿದಂತೆ ಒಟ್ಟು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 9 ರಿಂದ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಂಭವವಿದೆ.
ಮುಂದಿನ ದಿನಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ 12 ರಿಂದ 13 ಡಿಗ್ರಿ ಸೆಲ್ಸಿಯಸ್ ಮತ್ತು ಬೆಂಗಳೂರಿನಲ್ಲಿ 12 ರಿಂದ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.
ಸದ್ಯದ ಮುನ್ಸೂಚನೆಯ ಪ್ರಕಾರ, ಡಿಸೆಂಬರ್ 17 ರ ನಂತರ ರಾಜ್ಯದಲ್ಲಿ ಚಳಿಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಮತ್ತು ತಾಪಮಾನ ಏರಿಕೆಯಾಗುವ ನಿರೀಕ್ಷೆ ಇದೆ.

