ರಾಜ್ಯದ ಹವಾಮಾನದಲ್ಲಿ ಸದ್ಯಕ್ಕೆ ಯಾವುದೇ ದೊಡ್ಡ ಬದಲಾವಣೆಗಳಿಲ್ಲ. ಕಳೆದ ಕೆಲವು ದಿನಗಳಿಂದ ಕಾಡುತ್ತಿರುವ ಒಣಹವೆ ಹಾಗೂ ಮೈ ಕೊರೆಯುವ ಚಳಿ ಮುಂದಿನ ಕೆಲವು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನವು ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಚಳಿಯ ತೀವ್ರತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಕಡ್ಡಾಯವಾಗಿ ಬೆಚ್ಚಗಿನ ಉಡುಪುಗಳನ್ನು ಧರಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಆರೋಗ್ಯದ ದೃಷ್ಟಿಯಿಂದ ನಿರ್ಲಕ್ಷ್ಯ ಬೇಡ ಎಂಬ ಎಚ್ಚರಿಕೆಯನ್ನೂ ನೀಡಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಂಪೂರ್ಣ ಒಣಹವೆ ಇರಲಿದೆ. ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವೇ ಇರಲಿದ್ದು, ಬೆಳಗಿನ ಜಾವ ಚಳಿಯ ಪ್ರಮಾಣ ಹೆಚ್ಚಿರಲಿದೆ.
ಮೈಸೂರು, ಕೊಡಗು, ಶಿವಮೊಗ್ಗ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣದ ಜಿಲ್ಲೆಗಳಲ್ಲೂ ಹವಾಮಾನದಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲದೆ ಒಣಹವೆಯೇ ಮುಂದುವರಿಯಲಿದೆ.
ಡಿಸೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಮಳೆಯ ಲಕ್ಷಣಗಳಿಲ್ಲ. ಆದರೆ, ಹೊಸ ವರ್ಷದ ಆರಂಭದಲ್ಲಿ ವರುಣನ ಆರ್ಭಟವಿರಬಹುದು ಎಂದು ಇಲಾಖೆ ಅಂದಾಜಿಸಿದೆ. ಜನವರಿ ಮೊದಲ ವಾರದಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

