November 16, 2026
Monday, November 16, 2026
spot_img

WEATHER | ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಒಣಹವೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ಮಳೆಗೆ ವಿರಾಮ ಬಿದ್ದಿದ್ದು, ಮುಂದಿನ ಒಂದು ವಾರಗಳ ಕಾಲ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಯಾವುದೇ ಜಿಲ್ಲೆಗಳಲ್ಲಿ ಮಳೆಯಾಗುವ ಲಕ್ಷಣಗಳಿಲ್ಲ. ಹೀಗಾಗಿ, ಬಿಸಿಲು ಮತ್ತು ಚಳಿಯ ವಾತಾವರಣವೇ ಮುಂದುವರಿಯಲಿದೆ.

ಎಲ್ಲೆಲ್ಲಿ ಹೇಗಿದೆ ಹವಾಮಾನ?

ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಂಪೂರ್ಣ ಒಣಹವೆ ಇರಲಿದೆ. ಇತ್ತ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇಲ್ಲ.

ಅದೇ ರೀತಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಒಣಹವೆಯ ವಾತಾವರಣ ಮುಂದುವರಿಯಲಿದೆ.

ಉತ್ತರ ಕರ್ನಾಟಕದ ಬೀದರ್‌ನಲ್ಲಿ ಬಯಲು ಪ್ರದೇಶಗಳಲ್ಲೇ ಅತಿ ಕಡಿಮೆ ಎಂದರೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಚಳಿಯ ತೀವ್ರತೆಯನ್ನು ಹೆಚ್ಚಿಸಿದೆ.

ಮುಂದಿನ ಏಳು ದಿನಗಳ ಕಾಲ ಹಗಲಿನಲ್ಲಿ ಸಾಮಾನ್ಯ ಬಿಸಿಲಿನ ವಾತಾವರಣವಿದ್ದರೆ, ಮುಂಜಾನೆ ಮತ್ತು ರಾತ್ರಿ ವೇಳೆಯಲ್ಲಿ ತಂಪಾದ ಗಾಳಿ ಹಾಗೂ ಚಳಿಯ ಅನುಭವವಾಗಲಿದೆ.

Must Read