ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿವಿಧೆಡೆ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ ಒಟ್ಟು 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿಯಲ್ಲಿ ಭೀಕರ ಬಿರುಗಾಳಿ ಮುನ್ಸೂಚನೆ
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರಕೃತಿಯ ವಿಕೋಪ ಜೋರಾಗಿದೆ. ಈ ಪ್ರದೇಶಗಳಲ್ಲಿ ಗಂಟೆಗೆ ಸುಮಾರು 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಸಂಡ ಮಾರುತ ಬೀಸುವ ಸಾಧ್ಯತೆಯಿದ್ದು, ಭಾರಿ ಮಳೆಯಾಗಲಿದೆ. ಹೀಗಾಗಿ ಕರಾವಳಿ ಜನತೆಗೆ ಸುರಕ್ಷಿತವಾಗಿರಲು ಹವಾಮಾನ ಇಲಾಖೆ ತೀವ್ರ ಎಚ್ಚರಿಕೆ ನೀಡಿದೆ.
ಮಲೆನಾಡು ಹಾಗೂ ಒಳನಾಡಿನ ಸ್ಥಿತಿ
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಇಲ್ಲಿಯೂ ಕೂಡ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೂ ಆರೆಂಜ್ ಅಲರ್ಟ್ ನೀಡಲಾಗಿದ್ದು, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯೊಂದಿಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಕೋಲಾರ ಮತ್ತು ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತಂಪಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.



