ರಾಜ್ಯದ ಜನತೆಗೆ ಮುಂದಿನ ನಾಲ್ಕು ದಿನಗಳ ಕಾಲ ಚಳಿಯ ನಡುಕ ಹಾಗೂ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತೀವ್ರತರವಾದ ಚಳಿ ಕಾಣಿಸಿಕೊಳ್ಳುತ್ತಿದ್ದು, ಹವಾಮಾನದಲ್ಲಿ ಯಾವುದೇ ಮಹತ್ತರ ಬದಲಾವಣೆ ಇಲ್ಲದೆ ಇದೇ ಪರಿಸ್ಥಿತಿ ಮುಂದುವರಿಯಲಿದೆ.
ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಚಳಿಯ ತೀವ್ರತೆ ಹೆಚ್ಚಿರಲಿದ್ದು, ಕಡು ಮಂಜು ಹಾಗೂ ಒಣ ಹವೆ ಇರಲಿದೆ.
ಬೆಂಗಳೂರು, ಮೈಸೂರು, ಕೋಲಾರ, ಹಾಸನ ಹಾಗೂ ಶಿವಮೊಗ್ಗ ಸೇರಿದಂತೆ ದಕ್ಷಿಣದ ಬಹುತೇಕ ಜಿಲ್ಲೆಗಳಲ್ಲಿ ಶೀತಗಾಳಿಯ ಪ್ರಭಾವ ಹೆಚ್ಚಿರಲಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಕಂಡುಬರಲಿದೆ.
ಬೆಂಗಳೂರಿನಲ್ಲಿ ಬೆಳಿಗ್ಗೆಯ ಅವಧಿಯಲ್ಲಿ ದಟ್ಟ ಮಂಜು ಕವಿಯುತ್ತಿದ್ದು, ತಾಪಮಾನದಲ್ಲಿ ಏರಿಳಿತವಾಗುತ್ತಿದೆ. ಶೀತದ ವಾತಾವರಣದಿಂದಾಗಿ ಆರೋಗ್ಯ ಸಮಸ್ಯೆಗಳು ಕಾಡುವ ಸಾಧ್ಯತೆ ಇರುವುದರಿಂದ, ಹೊರಗಡೆ ಬರುವಾಗ ಕಡ್ಡಾಯವಾಗಿ ಬೆಚ್ಚಗಿನ ಉಡುಪುಗಳನ್ನು ಧರಿಸುವಂತೆ ವೈದ್ಯರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.


