ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಹಾಗೂ ಸುಳಿಗಾಳಿಯ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ವಾತಾವರಣ ತಂಪಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಳಿಯ ಜೊತೆಗೆ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ
ನಾಳೆಯೂ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಮೋಡಕವಿದ ವಾತಾವರಣದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.



