October 2, 2026
Friday, October 2, 2026
spot_img

WEATHER | ರಾಜ್ಯದಲ್ಲಿ ವರುಣನ ಅಬ್ಬರ: ಮುಂದಿನ 48 ಗಂಟೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ್ದು, ಕರಾವಳಿ ಜನತೆ ಜಾಗರೂಕರಾಗಿರಲು ಸೂಚಿಸಲಾಗಿದೆ.

ಎಲ್ಲೆಲ್ಲಿ ಮಳೆ? ಎಲ್ಲೆಲ್ಲಿ ಒಣಹವೆ?

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನ ಭಾಗಗಳಾದಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಹಲವೆಡೆ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದ್ದರೆ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆಯೇ ಮುಂದುವರಿಯಲಿದೆ.

ಹೊಸಕೋಟೆ, ಬೇಲೂರು, ಹುಬ್ಬಳ್ಳಿಯಲ್ಲಿ ಉತ್ತಮ ಮಳೆ

ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮುಂಗಾರು ತಕ್ಕಮಟ್ಟಿಗೆ ಚುರುಕಾಗಿದ್ದು, ಈ ಅವಧಿಯಲ್ಲಿ ಹಾಸನ ಜಿಲ್ಲೆಯ ಬೇಲೂರು, ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಹಾಗೂ ಧಾರವಾಡದ ಹುಬ್ಬಳ್ಳಿಯಲ್ಲಿ ತಲಾ 4 ಸೆಂ.ಮೀ ನಷ್ಟು ಉತ್ತಮ ಮಳೆಯಾಗಿರುವುದು ವರದಿಯಾಗಿದೆ. ಅ. 3 ರ ಶನಿವಾರದವರೆಗೂ ರಾಜ್ಯದಲ್ಲಿ ಇದೇ ರೀತಿಯ ಹವಾಮಾನ ಪರಿಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

Must Read