ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಹಾಗೂ ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ. ಇದೇ ವೇಳೆ, ಉತ್ತರ ಕರ್ನಾಟಕದ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಕಲಬುರಗಿಯಲ್ಲಿ ಗರಿಷ್ಠ 33.5 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗಿದ್ದು, ಎಚ್‌ಎಎಲ್‌ನಲ್ಲಿ ಗರಿಷ್ಠ 29.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮಂಗಳೂರು, ಕಾರವಾರ, ಬೀದರ್, ಧಾರವಾಡ, ಬೆಳಗಾವಿ ಹಾಗೂ ರಾಯಚೂರಿನಲ್ಲೂ ತಾಪಮಾನದಲ್ಲಿ ವ್ಯತ್ಯಾಸ ಕಂಡುಬಂದಿದೆ.