ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಿಳಿಸಿದೆ. ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಮೈಸೂರು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಮಂಡ್ಯ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡು, ಕರಾವಳಿಯಲ್ಲಿ ವರುಣಾರ್ಭಟ
ಅಕ್ಟೋಬರ್ 16ರಂದು ಮಳೆರಾಯ ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಿದ್ದಾನೆ. ಈ ದಿನ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಬಹುದು.
ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆ
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಬಿರುಗಾಳಿಯ ಭೀತಿಯೂ ಇದೆ. ರಾಯಚೂರು, ಗದಗ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಅಕ್ಟೋಬರ್ 16ರಂದು ಈ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ಗೆ ಏರಿಕೆಯಾಗಲಿದ್ದು, ಬಾಗಲಕೋಟೆ, ಬೆಳಗಾವಿ, ಧಾರವಾಡ ಹಾಗೂ ವಿಜಯಪುರ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ.
ಮಳೆ ಹಾಗೂ ಸಿಡಿಲು ಹೆಚ್ಚಿರುವ ಪ್ರದೇಶಗಳಲ್ಲಿ ಜನರು ಸುರಕ್ಷಿತವಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.



