ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ರೈತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಹೈ ಅಲರ್ಟ್:
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಹೆಚ್ಚಾಗಿರಲಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ಆರ್ಭಟ:
ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲೂ ಇದೇ ವೇಗದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಹಾವೇರಿ ಮತ್ತು ಕೊಪ್ಪಳದ ಕೆಲವು ಸ್ಥಳಗಳಲ್ಲಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಭಾಗಗಳಲ್ಲೂ ಬಲವಾದ ಗಾಳಿಯ ವಾತಾವರಣ ಇರಲಿದೆ.
ದಕ್ಷಿಣ ಒಳನಾಡಿನಲ್ಲೂ ಮಳೆ :
ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಜತೆಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿರುಗಾಳಿಯ ತೀವ್ರತೆ ಹೆಚ್ಚಿರಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ರಾಮನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಹಾಗೂ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಬಿರುಗಾಳಿಯ ಆರ್ಭಟ ಮುಂದುವರಿಯಲಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಕೋರಲಾಗಿದೆ.



