November 4, 2026
Wednesday, November 4, 2026
spot_img

WEATHER | ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ: ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ಮಳೆರಾಯನ ಅಬ್ಬರ ಸದ್ಯಕ್ಕೆ ಶಮನಗೊಳ್ಳುವಂತೆ ಕಾಣುತ್ತಿಲ್ಲ. ನವೆಂಬರ್ 4 ಮತ್ತು 5ರಂದು ರಾಜ್ಯದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಎಚ್ಚರಿಕೆಯನ್ನೂ ನೀಡಲಾಗಿದೆ.

ನವೆಂಬರ್ 4ರಂದು ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಿಡಿಲು, ಗುಡುಗು ಸಹಿತ ಮಳೆಯಾಗಲಿದೆ. ಈ ಭಾಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾರ್ವಜನಿಕರು ಹಾಗೂ ರೈತರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನವೆಂಬರ್ 5ರವರೆಗೆ ಗುಡುಗು, ಮಿಂಚು ಹಾಗೂ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ತೀರದ ಜನರು ಜಾಗರೂಕತೆ ವಹಿಸುವುದು ಒಳಿತು.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಆದರೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಒಣಹವೆ ಮುಂದುವರಿಯಲಿದೆ.

Must Read