ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಹಲವೆಡೆ ಹವಾಮಾನದಲ್ಲಿ ಏಕಾಏಕಿ ಬದಲಾವಣೆಯಾಗಿದ್ದು, ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಸೇರಿದಂತೆ ಒಟ್ಟು 11 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮಲೆನಾಡು ಮತ್ತು ದಕ್ಷಿಣದ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇದರೊಂದಿಗೆ ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಒಂದೆಡೆ ದಕ್ಷಿಣ ಭಾಗದಲ್ಲಿ ಮಳೆಯ ವಾತಾವರಣವಿದ್ದರೆ, ಮತ್ತೊಂದೆಡೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣಹವೆ ಮುಂದುವರಿಯಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದ್ದು, ಒಣಹವೆಯೇ ಮೇಲುಗೈ ಸಾಧಿಸಲಿದೆ. ಹಾಗೆಯೇ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲೂ ಒಣಹವೆ ಇರಲಿದೆ.



