October 31, 2026
Saturday, October 31, 2026
spot_img

WEATHER | ಚಳಿಗೂ ಮುಂಚೆ ಮಳೆಯ ಅಬ್ಬರ: ಯಾವ್ಯಾವ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ ಬದಲಾವಣೆಯಾಗುತ್ತಿದ್ದು, ನವೆಂಬರ್ ಆರಂಭದಲ್ಲೇ ಮಳೆಯ ಅಬ್ಬರ ಜೋರಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನವೆಂಬರ್ 1 ರಿಂದ 5 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ, ಸಿಡಿಲು-ಮಿಂಚು ಹಾಗೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ನವೆಂಬರ್ 1 ರಿಂದ 3 ರವರೆಗೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಅಲ್ಲಲ್ಲಿ ಸಿಡಿಲು ಮತ್ತು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ರಾಯಚೂರು, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದರೆ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರಗಿ, ಹಾವೇರಿ ಮತ್ತು ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ.

ಮೈಸೂರು, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಸಿಲಿಕಾನ್ ಸಿಟಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಆದರೆ ತುಮಕೂರು, ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಒಣ ಹವೆ ಇರಲಿದೆ.

ಆರಂಭದಲ್ಲಿ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾದರೆ, ದಕ್ಷಿಣ ಕನ್ನಡದಲ್ಲಿ ಒಣ ಹವೆ ಇರಲಿದೆ. ಆದರೆ, ನವೆಂಬರ್ 3 ರಿಂದ 5 ರವರೆಗೆ ಕರಾವಳಿ ಕರ್ನಾಟಕದಾದ್ಯಂತ ವರುಣನ ಆರ್ಭಟ ಹೆಚ್ಚಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ರೈತರು ಹಾಗೂ ಕರಾವಳಿ ಭಾಗದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವುದು ಉತ್ತಮ.

Must Read